ತುಮಕೂರು: ಶಾಸಕ ಬಿ. ಸತ್ಯನಾರಾಯಣ ನಿಧನದಿಂದ ತೆರವಾಗಿರುವ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಸದ್ಯದಲ್ಲೇ ಉಪ ಚುನಾವಣೆ ಘೋಷಣೆಯಾಗಲಿದೆ.
ಈ ಹಿನ್ನೆಲೆಯಲ್ಲಿ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತಮ್ಮದೇ ಆದ ರಾಜಕೀಯ ಕಾರ್ಯತಂತ್ರವನ್ನು ರೂಪಿಸುತ್ತಿವೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ, ಶಿರಾ ವಿಧಾನಸಭಾ ಕ್ಷೇತ್ರವನ್ನು ಶತಾಯಗತಾಯ ತನ್ನದಾಗಿಸಿಕೊಳ್ಳಲು ಸರ್ವ ಪ್ರಯತ್ನ ನಡೆಸುತ್ತಿದೆ. ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ಗೆ ಪೈಪೋಟಿ ನೀಡುವ ಪ್ರಬಲ ಅಭ್ಯರ್ಥಿಯಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ಗೌಡ ಅವರನ್ನು ಅಖಾಡಕ್ಕೆ ಇಳಿಸುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬರ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ಈಗಾಗಲೇ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹಾಗೂ ಜಿಲ್ಲಾಧ್ಯಕ್ಷರು ಆಗಿರುವ ಸುರೇಶ್ ಗೌಡ ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ.
ಕಾಂಗ್ರೆಸ್ನಿಂದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಾಗೂ ಜೆಡಿಎಸ್ನಿಂದ ಸತ್ಯನಾರಾಯಣ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡುವುದು ಅಥವಾ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಜೆಡಿಎಸ್ ಮುಖಂಡರಿಗೆ ಟಿಕೆಟ್ ನೀಡುವ ಸಾಧ್ಯತೆಯಿದೆ. ಈಗಾಗಲೇ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಮಿನಿ ವಿಧಾನಸೌಧದ ಕಟ್ಟಡವನ್ನು ಸಚಿವರು ಉದ್ಘಾಟನೆ ನೆರವೇರಿಸಿದ್ದಾರೆ. ಈ ಮೂಲಕ ಶಾಸಕರು ಇಲ್ಲದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವುದು ಸರ್ಕಾರದ ಕರ್ತವ್ಯ ಎಂದು ಬಿಜೆಪಿ ಪ್ರತಿಪಾದಿಸುತ್ತಿದೆ.
ಇನ್ನು ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುತ್ತಿರುವ ಬಿಜೆಪಿ, ಎಲ್ಲಾ ಆಯಾಮಗಳಲ್ಲಿ ಚುನಾವಣೆ ಎದುರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಇತ್ತೀಚೆಗೆ ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿ ಜಯ ಸಾಧಿಸಿತ್ತು. ಈ ವಿಶ್ವಾಸವೇ ಬಿಜೆಪಿಯ ಶಿರಾ ಕ್ಷೇತ್ರವನ್ನು ಸುಲಭವಾಗಿ ತನ್ನ ತೆಕ್ಕೆಗೆ ತೆಗೆದುಕೊಳ್ಳಬಹುದು ಎಂಬ ನಂಬಿಕೆ ಇಟ್ಟುಕೊಂಡಿದೆ. ಅಲ್ಲದೇ ಅಭ್ಯರ್ಥಿ ಆಯ್ಕೆಯಲ್ಲಿಯೂ ಬಿಜೆಪಿ ಸೂಕ್ಷ್ಮವಾಗಿ ಹೆಜ್ಜೆ ಇರಿಸುತ್ತಿದೆ. ಇನ್ನು ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಿಜೆಪಿ ಕೋರ್ ಕಮಿಟಿ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ ಎಂದು ಹೇಳಲಾಗ್ತಿದೆ.