ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮ ಪಂಚಾಯಿತಿಯು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿ ಬರೋಬ್ಬರಿ ಒಂದು ವರ್ಷ ಕಳೆಯುತ್ತಾ ಬಂದಿದೆ. ಇಂದಿಗೂ ಕೂಡ ಪೂರ್ಣಪ್ರಮಾಣದಲ್ಲಿ ಪಟ್ಟಣ ಪಂಚಾಯಿತಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದೇ ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ಹುಳಿಯಾರು ಗ್ರಾಮ ಪಂಚಾಯಿತಿಯಲ್ಲಿ ಇದ್ದಂತಹ ಸಿಬ್ಬಂದಿ ಸೇರಿದಂತೆ ಪಟ್ಟಣ ಪಂಚಾಯಿತಿಗೆ ಒಟ್ಟು 23 ಮಂದಿಯನ್ನು ನೇಮಕ ಮಾಡಲಾಗಿದೆ. ಆದರೆ, 2019ರ ಅಕ್ಟೋಬರ್ನಿಂದ ಈ ಸಿಬ್ಬಂದಿಗೆ ವೇತನ ದೊರೆಯದೆ ಗೊಂದಲದಲ್ಲಿ ಸಿಲುಕಿದ್ದಾರೆ. ನಿತ್ಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಅವರೊಂದಿಗೆ ಸಿಬ್ಬಂದಿ ವೇತನಕ್ಕಾಗಿ ವಾಗ್ವಾದ ನಡೆಸುವುದು ಸಾಮಾನ್ಯವಾಗಿದೆ.
ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೆ ಏರಿದ ನಂತರ ಸಿಬ್ಬಂದಿ ವೇತನದ ಕುರಿತು ಜಿಲ್ಲಾ ಖಜಾನೆಯಲ್ಲಿ ತಾಂತ್ರಿಕ ತೊಂದರೆ ಎದುರಾಗಿರುವುದು ಕಾರಣವಾಗಿದೆ. ಹೀಗಾಗಿ ಸಿಬ್ಬಂದಿ ನಾಲ್ಕು ತಿಂಗಳಿಂದ ವೇತನವಿಲ್ಲದೇ ಕೆಲಸ ನಿರ್ವಹಿಸುವಂತಾಗಿದೆ. ಅಲ್ಲದೇ ತಾಂತ್ರಿಕ ಸಮಸ್ಯೆಯನ್ನು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿಬ್ಬಂದಿಗೆ ಮನವರಿಕೆ ಮಾಡಿಕೊಡುವುದೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸ್ವತಃ ಮುಖ್ಯ ಅಧಿಕಾರಿ ಮಂಜುನಾಥ್ ಅವರಿಗೆ ವೇತನವಿಲ್ಲದೇ ಕೆಲಸ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಾಂತ್ರಿಕ ಸಮಸ್ಯೆ ಬಗೆಹರಿದ ನಂತರ ಈ ಹಿಂದಿನ ತಿಂಗಳ ವೇತನ ಎಲ್ಲವೂ ಸಿಬ್ಬಂದಿಗೆ ಲಭ್ಯವಾಗಲಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಧುಸ್ವಾಮಿ ಅವರು ಪ್ರತಿನಿಧಿಸುವ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹುಳಿಯಾರು ಪಟ್ಟಣ ಪಂಚಾಯಿತಿಯಲ್ಲಿ ನಿರ್ಮಾಣವಾಗಿರುವ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಇನ್ನುಮುಂದಾದರೂ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.