ತುಮಕೂರು: ಪೌರಕಾರ್ಮಿಕರ ಪರಿಶ್ರಮದಿಂದ ತುಮಕೂರು ಮಹಾನಗರ ಪಾಲಿಕೆ ಸ್ವಚ್ಛ ಸರ್ವೇಕ್ಷಣೆ 2020ರಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಹಾಗೂ ದೇಶದಲ್ಲಿ 48ನೇ ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರ ಎಂದು ಮಹಾನಗರ ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ನರಸಿಂಹಮೂರ್ತಿ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಪೌರಕಾರ್ಮಿಕರ ದಿನಾಚರಣೆಯನ್ನು ನಗರದ ಬಾಲಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಮಹಾನಗರಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ ಉದ್ಘಾಟಿಸಿದರು.
ಪೌರಕಾರ್ಮಿಕರು ಸ್ವಚ್ಛತೆಯ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ನಗರವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅದರಲ್ಲೂ ಕೋವಿಡ್-19 ಸಂದರ್ಭದಲ್ಲಿ ತಮ್ಮ ಆರೋಗ್ಯದ ಕಡೆ ಗಮನ ವಹಿಸುವ ಜೊತೆಗೆ ನಗರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಕಾರ್ಯ ಮಗ್ನರಾಗಿರುವುದು ಶ್ಲಾಘನೀಯ ವಿಚಾರ ಎಂದರು.
ಪೌರಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಮಹಾನಗರ ಪಾಲಿಕೆ ವತಿಯಿಂದ ಎಲ್ಲರಿಗೂ ಜೀವ ವಿಮೆ ಮಾಡಿಸಲಾಗಿದೆ. ವಸತಿ ರಹಿತ ಪೌರಕಾರ್ಮಿಕರಿಗೆ ವಸತಿ ನೀಡಲು ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಕ್ರಮ ಕೈಗೊಳ್ಳುವ ಕಾರ್ಯ ನಡೆಯುತ್ತಿದೆ. ಸರ್ಕಾರದ ಸೌಲಭ್ಯವನ್ನು ಪ್ರತಿಯೊಬ್ಬ ಪೌರಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ವೇಳೆ ಕಿವಿಮಾತು ಹೇಳಿದರು.