ತುಮಕೂರು: ಫೆಬ್ರವರಿಯಲ್ಲಿ ಮಂಡಿಸುವ ಬಜೆಟ್ ಎಲ್ಲಾ ವರ್ಗದವರಿಗೂ ಪೂರಕ ರೀತಿಯಲ್ಲಿರುವ ಮೂಲಕ ಬಿ ಎಸ್ ಯಡಿಯೂರಪ್ಪನವರು ಕರ್ನಾಟಕ ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸಲಿದ್ದಾರೆ ಎಂದು ಶಾಸಕ ಜ್ಯೋತಿಗಣೇಶ್ ತಿಳಿಸಿದರು.
ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ನೂರು ದಿನಗಳ ಅಭಿವೃದ್ಧಿಯ ಓಟವನ್ನು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಾಣಬಹುದಾಗಿದೆ.
ಯಡಿಯೂರಪ್ಪನವರು ಅಧಿಕಾರ ಪಡೆದ ಆರಂಭದಲ್ಲಿ ದೊಡ್ಡ ಸವಾಲಾದ ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಿ, ನೆರೆ ಸಂತ್ರಸ್ತರಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಯಶಸ್ವಿಯಾದರು. ಮುಂದಿನ ದಿನಗಳಲ್ಲಿ ಉದ್ಯೋಗ ಸೃಷ್ಟಿ ಮಾಡುವುದು, ವಿಶ್ವ ಬಂಡವಾಳ ಹೂಡಿಕೆದಾರರ ಗಮನ ಸೆಳೆಯುವುದು, ಎಲ್ಲಾ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಫೆಬ್ರವರಿಯಲ್ಲಿ ಮಂಡಿಸುವ ಬಜೆಟ್ ಆಶಾದಾಯಕವಾಗಿ ಇರಲಿದೆ. ಆ ಮೂಲಕ ಎಲ್ಲಾ ವರ್ಗದವರಿಗೂ ಪೂರಕವಾದ ಕರ್ನಾಟಕವನ್ನು ರೂಪಿಸಲಿದ್ದಾರೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸುಮಾರು 400 ಅಂಗನವಾಡಿ ಕಟ್ಟಡಗಳನ್ನು ಜಿಲ್ಲೆಯಲ್ಲಿ ನಿರ್ಮಾಣ ಮಾಡಲಾಗಿದೆ. ಮಾತೃಶ್ರೀ, ಮಾತೃ ವಂದನಾ ಹಾಗೂ ಜನನಿ ಸುರಕ್ಷಾ ಯೋಜನೆ ಬಳಕೆಯಲ್ಲಿ ರಾಜ್ಯದಲ್ಲಿಯೇ ತುಮಕೂರು ಪ್ರಥಮ ಸ್ಥಾನದಲ್ಲಿರುವುದು ಹೆಮ್ಮೆಯ ವಿಚಾರ ಎಂದರು.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಸೇವಾ ಯೋಜನೆಯನ್ನು ಜನವರಿಯಿಂದ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿತರಣೆ ಮಾಡಲು ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೊತೆಗೆ ಜಿಲ್ಲೆಯಲ್ಲಿ ಎದುರಿಸುತ್ತಿರುವ ಅಪೌಷ್ಟಿಕತೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕೈಜೋಡಿಸಿ ಸಹಕಾರ ನೀಡಬೇಕು ಎಂದರು.
ಛಾಯಾಚಿತ್ರ ಪ್ರದರ್ಶನದಲ್ಲಿ ಪ್ರವಾಹ ಸಂತ್ರಸ್ತರ ಸ್ಥಳಗಳನ್ನು ಮುಖ್ಯಮಂತ್ರಿಗಳು ವೀಕ್ಷಿಸುತ್ತಿರುವುದು, ಕಾರ್ಮಿಕ ಇಲಾಖೆಯ ಯೋಜನೆ, ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಸತಿ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಯೋಜನೆ ಮುಂತಾದವುಗಳ ಬಗ್ಗೆ ಪ್ರಕಟಿಸಲಾಗಿತ್ತು.
ಇದೇ ಸಂದರ್ಭದಲ್ಲಿ ನಗರದ ಕೆಎಸ್ಆರ್ಟಿಸಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ್ ಮುಂತಾದವರು ಹಾಜರಿದ್ದರು.