ತುಮಕೂರು: ಪಾವಗಡದ ಸರ್ಕಾರಿ ಆದರ್ಶ ವಿದ್ಯಾಲಯದ ಕಟ್ಟಡದ ಮೇಲ್ಛಾವಣಿ ಕುಸಿಯುವ ಸ್ಥಿತಿಗೆ ತಲುಪಿದ್ದು, ಮಕ್ಕಳು ಹಾಗೂ ಶಿಕ್ಷಕರು ಅನಿವಾರ್ಯವಾಗಿ ಬೇರೆ ಕಟ್ಟಡವಿಲ್ಲದೆ ಶಿಥಿಲಗೊಂಡಿರುವ ಕೊಠಡಿಯಲ್ಲೇ ಪಾಠ ಮುಂದುವರಿಸಿದ್ದಾರೆ.
8, 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲಿ ಪಾಠ ಪ್ರವಚನಗಳು ನಡೆಯುತ್ತಿವೆ. ಈ ಹಿಂದೆ ತಾಲೂಕಿಗೆ ಒಂದು ಇಂಗ್ಲಿಷ್ ಮಾಧ್ಯಮದ ಸರ್ಕಾರಿ ಆದರ್ಶ ವಿದ್ಯಾಲಯ ಮಂಜೂರು ಮಾಡಲಾಗಿತ್ತು. ಅದರಂತೆ ಪಾವಗಡ ಪಟ್ಟಣದಲ್ಲಿಯೂ ಚಾಲ್ತಿಯಲ್ಲಿದೆ. ಆದರೆ ಪೂರಕ ಕಟ್ಟಡವಿಲ್ಲದೆ ವಿದ್ಯಾರ್ಥಿಗಳು ಶಿಥಿಲಗೊಂಡಿರುವ ಕೊಠಡಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದಾರೆ.
ಹಿಂದೆ ಪಾವಗಡ ತಾಲೂಕಿನ ಅರಸೀಕೆರೆ ಗ್ರಾಮದ ಬಳಿ ಶಾಲೆಯ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. ಆದರೆ ಈಗ ಇರುವ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಶಾಲೆಯನ್ನು ಸ್ಥಳಾಂತರಿಸುವುದು ಸರಿಯಲ್ಲ ಎಂದು ನ್ಯಾಯಾಲಯದ ಮೊರೆ ಹೋಗಿರುವುದು ಹಲವು ಗೊಂದಲಗಳಿಗೆ ಕಾರಣವಾಗಿದೆ. ಶಿಥಿಲಗೊಂಡಿರುವ ಶಾಲಾ ಕಟ್ಟಡವನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲು ಶಾಲಾಭಿವೃದ್ಧಿ ಸಮಿತಿಯ ಸದಸ್ಯರೇ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಆರೋಪಿಸಲಾಗಿದೆ.