ತುಮಕೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ರಾಜ್ಯದ ಗ್ರಾಮ ಲೆಕ್ಕಾಧಿಕಾರಿಗಳ ಕುಂದು ಕೊರತೆ ಮತ್ತು ಮುಂಬಡ್ತಿಯಲ್ಲಿ ಆಗುತ್ತಿರುವಂತಹ ಅನ್ಯಾಯವನ್ನು ಸರಿಪಡಿಸಬೇಕು. ರಜಾ ದಿನಗಳಲ್ಲಿ ಕೆಲಸದ ಒತ್ತಡವನ್ನು ನೌಕರರ ಮೇಲೆ ಹೇರುವುದರಿಂದ ಮಾನಸಿಕ ಕಿರುಕುಳಕ್ಕೆ ಒಳಗಾಗಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಆದ್ದರಿಂದ ಕೆಲಸದ ಒತ್ತಡವನ್ನು ತಡೆಯಬೇಕು. ಜಾಬ್ ಚಾರ್ಟ್ ನೀಡಬೇಕು. ಪ್ರಯಾಣ ಭತ್ಯೆ 500ರಿಂದ 1,000 ರೂ.ಗೆ ಹೆಚ್ಚಿಸಬೇಕು. ಕೆಲಸದ ಸಮಯದಲ್ಲಿ ನೌಕರರು ಮೃತಪಟ್ಟರೆ ನೀಡುವಂತಹ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಧರಣಿನಿರತರು ಒತ್ತಾಯಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು ಮಾತನಾಡಿ, ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ಇಂದು ಪ್ರತಿಭಟನೆ ನಡೆಸಲಾಗುತ್ತಿದೆ. ಒಂದು ವೇಳೆ ನಮ್ಮ ಬೇಡಿಕೆಗಳು ಈಡೇರದಿದ್ದರೆ ಬೆಂಗಳೂರಿನ ಫ್ರೀಡಂ ಪಾರ್ಕ್ ಮುಂದೆ ಪ್ರತಿಭಟನೆ ನಡೆಸುವುದರ ಮೂಲಕ ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.