ತುಮಕೂರು: ಲಾಕ್ಡೌನ್ ವೇಳೆ ಅತಿಥಿ ಉಪನ್ಯಾಸಕರು ಹಾಗೂ ಗುತ್ತಿಗೆ ನೌಕರರು ವೇತನವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದು, ಅವರಿಗೆ ಉದ್ಯೋಗ ಭದ್ರತೆಯೊಂದಿಗೆ ಕೂಡಲೇ ವೇತನ ಪಾವತಿಸಬೇಕೆಂದು ಒತ್ತಾಯಿಸಿ ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ತುಮಕೂರು ವಿವಿ ಉಪಕುಲಪತಿ ಸಿದ್ದೇಗೌಡಗೆ ಮನವಿ ಸಲ್ಲಿಸಿದರು.
ಉಪಕುಲಪತಿ ಅವರನ್ನ ಭೇಟಿಯಾದ ಕಾಂಗ್ರೆಸ್ ಮುಖಂಡರ ನಿಯೋಗ, ಜಿಲ್ಲೆಯ ಮಧುಗಿರಿ, ಕೊರಟಗೆರೆ, ಪಾವಗಡ, ತುರುವೇಕೆರೆ, ಕುಣಿಗಲ್, ತಿಪಟೂರು, ಚಿಕ್ಕನಾಯಕನಹಳ್ಳಿ, ಸಿರಾ ತಾಲೂಕು ಸೇರಿದಂತೆ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನೂರಾರು ಅತಿಥಿ ಉಪನ್ಯಾಸಕರು ಮತ್ತು ಗುತ್ತಿಗೆ ಆಧಾರಿತ ನೌಕರರು ಕೆಲಸ ಮಾಡುತ್ತಿದ್ದಾರೆ. ಲಾಕ್ಡೌನ್ನಿಂದಾಗಿ ಕಳೆದ ಮೂರು ತಿಂಗಳಿಂದ ಅವರಿಗೆ ವೇತನವಿಲ್ಲದೆ ಕಂಗಾಲಾಗಿದ್ದಾರೆ.
ಈಗಾಗಲೇ ವಿಶ್ವವಿದ್ಯಾಲಯದ ವತಿಯಿಂದ ಆನ್ಲೈನ್ ಮೂಲಕ ಪಾಠ-ಪ್ರವಚನಗಳನ್ನ ನಡೆಸಲಾಗುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಜೂಮ್ ಆ್ಯಪ್ ಇನ್ಸ್ಟಾಲ್ ಮಾಡಲು ಕಷ್ಟವಾಗುತ್ತಿದೆ. ಹೀಗಾಗಿ ಆಧುನಿಕ ಉಪಕರಣಗಳ ಲಭ್ಯತೆ ಇಲ್ಲದೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಾಕಷ್ಟು ಗೊಂದಲಕ್ಕೆ ಒಳಗಾಗಿದ್ದಾರೆ. ಈ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.