ತುಮಕೂರು : ವಿದೇಶಗಳಲ್ಲಿ ಕಚ್ಚಾ ತೈಲ ದರ ಇಳಿಕೆ ಮಾಡುತ್ತಿದ್ರೆ, ನಮ್ಮ ದೇಶದಲ್ಲಿ ಏರಿಕೆ ಮಾಡಲಾಗುತ್ತಿದೆ. ಅಲ್ಲದೇ ಬಿಜೆಪಿ ಸರ್ಕಾರದ ನೀತಿಯನ್ನು ಪ್ರಶ್ನಿಸಲು ಆಗದಂತಹ ಪರಿಸ್ಥಿತಿ ರಾಷ್ಟ್ರದಲ್ಲಿ ಉದ್ಭವವಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಶಾಸಕ ಡಾ. ರಫೀಕ್ ಅಹ್ಮದ್ ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳ ಬೆಲೆಯನ್ನು ದಿನೇದಿನೆ ಹೆಚ್ಚಳ ಮಾಡುತ್ತಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷ ರಾಮಕೃಷ್ಣ ಅವರ ನೇತೃತ್ವದಲ್ಲಿ ಪಕ್ಷದ ಕಚೇರಿ ಎದುರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಡಾ. ರಫೀಕ್ ಅಹ್ಮದ್, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆ ಆಗಿದ್ದರೂ ನಮ್ಮ ರಾಷ್ಟ್ರದಲ್ಲಿ ಮಾತ್ರ ಕಳೆದ 15 ದಿನಗಳಿಂದ ದಿನೇದಿನೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿದೆ. ಇದನ್ನು ಪ್ರಶ್ನಿಸಲು ಹೋದ್ರೆ ದೇಶದ್ರೋಹಿಯಾಗಿ ಕಾಣುತ್ತೇವೆ. ಮೂಲಸೌಲಭ್ಯಗಳ ಕುರಿತು ಪ್ರಶ್ನಿಸದ ಪರಿಸ್ಥಿತಿ ಪ್ರಸ್ತುತ ರಾಷ್ಟ್ರದಲ್ಲಿ ಉದ್ಭವವಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.