ತುಮಕೂರು: ಬರ ಪರಿಹಾರ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿವೆ ಎಂದು ಆರೋಪಿಸಿ ಭಾರತ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಜಿಯಿಸಿದ ಸಿಪಿಐನ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಮಾತನಾಡಿ, ಇಂದು ನಾವು ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಬರ ಪರಿಹಾರ ಮೊತ್ತ ನೀಡುವಲ್ಲಿ ತಾರತಮ್ಯವನ್ನು ಮಾಡುವುದರ ಜೊತೆಗೆ ಪರಿಹಾರ ಕಾಮಗಾರಿಗಳನ್ನು ಸರಿಯಾಗಿ ನಿರ್ವಹಿಸಲು ವಿಫಲವಾಗಿವೆ. ಜುಲೈ ತಿಂಗಳು ಕಳೆಯುತ್ತಾ ಬಂದರೂ ಸಹ ಇಲ್ಲಿಯವರೆಗೂ ರೈತರಿಗೆ ಯಾವುದೇ ಪರಿಹಾರ ನೀಡದೆ ಸರ್ಕಾರ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯದ ಜನಪ್ರತಿನಿಧಿಗಳು ರಾಜೀನಾಮೆ ನೀಡುವ ಮೂಲಕ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ. ಜನಪ್ರತಿನಿಧಿಗಳನ್ನು ಕಂಡು ನಗುವಂತಹ ಪರಿಸ್ಥಿತಿ ರಾಜ್ಯದಲ್ಲಿ ಉಂಟಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪಡಿತರ ಚೀಟಿ ವ್ಯವಸ್ಥೆ, ನ್ಯಾಯಬೆಲೆ ಅಂಗಡಿಗಳನ್ನು ಏಕಾಏಕಿ ಸ್ಥಳಾಂತರಗೊಳಿಸುವುದನ್ನು ನಿಲ್ಲಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಆಧಾರ್ ಕೇಂದ್ರಗಳನ್ನು ತೆರೆಯಬೇಕು. ಭೂ ರಹಿತ ಮತ್ತು ಬಡವರಿಗೆ ಬರಪರಿಹಾರ ಸೌಲಭ್ಯವನ್ನು ಶೀಘ್ರವಾಗಿ ಒದಗಿಸಬೇಕು ಎಂದು ಇದೇ ವೇಳೆ ಸರ್ಕಾರವನ್ನು ಒತ್ತಾಯಿಸಲಾಯಿತು.