ತುಮಕೂರು: ಕೋವಿಡ್-19 ಪರಿಹಾರ ಪ್ಯಾಕೇಜ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಅತಿಥಿ ಉಪನ್ಯಾಸಕರು ಇತರೆ ಸಂಘಟನೆಗಳ ಸಹಭಾಗಿತ್ವದಲ್ಲಿ ಪ್ರತಿಭಟನೆ ನಡೆಸಿದರು.
ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರಿಗೆ ಬಾಕಿ ಉಳಿದಿರುವ ಎಲ್ಲಾ ವೇತನವನ್ನು ಕೂಡಲೇ ಪಾವತಿ ಮಾಡಬೇಕು. ಸೇವಾ ಭದ್ರತೆ ಒದಗಿಸಬೇಕು. ನೇಮಕಾತಿಯಲ್ಲಿ ಪ್ರಥಮ ಆದ್ಯತೆ ನೀಡಬೇಕು. ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರಿಗೆ ಕೋವಿಡ್-19 ಹಿನ್ನೆಲೆಯಲ್ಲಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕ ಹಾಗೂ ಅತಿಥಿ ಶಿಕ್ಷಕರ ಹೋರಾಟ ಸಮಿತಿ ಮತ್ತು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ವತಿಯಿಂದ ಅತಿಥಿ ಉಪನ್ಯಾಸಕರಿಗೆ ಬಾಕಿ ಇರುವ ವೇತನ ಕೂಡಲೇ ಬಿಡುಗಡೆ ಮಾಡಬೇಕು ಮತ್ತು ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟಿಸಲಾಯಿತು.
ಈ ವೇಳೆ ಮಾತನಾಡಿದ ಡಾ. ಪುಟ್ಟರಾಜು, ನಾವು ಸಾಮಾಜಿಕ ನ್ಯಾಯದಿಂದ ವಂಚಿತರಾಗಿದ್ದೇವೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ಸಂಬಳ ನೀಡಿಲ್ಲ. ಹೀಗಾಗಿ ಜೀವನ ನಡೆಸಲು ಸಾಕಷ್ಟು ಕಷ್ಟ ಪಡಬೇಕಾಗಿದೆ. ಸರ್ಕಾರ ನಮಗೆ ಅನ್ಯಾಯ ಮಾಡುತ್ತಿದೆ. ಇನ್ನಾದರೂ ಸರ್ಕಾರ ಕೂಡಲೇ ಕ್ರಮ ಕೈಗೊಂಡು ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಿದರು.