ತುಮಕೂರು: ತುಮಕೂರು ನಗರದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಆದರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆ ಪಡೆಯಲು ಸಾಗುವಂತಹ ವಾಹನಗಳಿಗೆ ಇದು ಅನ್ವಯಿಸುವುದಿಲ್ಲ. ಆದರೆ ಕಂಪನಿಗಳಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ರಾತ್ರಿ 10 ಗಂಟೆಗೂ ಮುನ್ನವೇ ತಮ್ಮ ಕಚೇರಿಗಳನ್ನು ತಲುಪುವ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ಕಟ್ಟುನಿಟ್ಟಾಗಿ ರಾತ್ರಿ ಕರ್ಫ್ಯೂವನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
10 ಗಂಟೆಯ ನಂತರ ಬಾರ್, ಪಬ್, ರೆಸ್ಟೋರೆಂಟ್ಗಳನ್ನು ಕಡ್ಡಾಯವಾಗಿ ಮುಚ್ಚಿಸಲಾಗುವುದು. ಅಲ್ಲದೇ ವಾಣಿಜ್ಯ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್ ಹಾಕಲಾಗುವುದು. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಹತ್ತು ಗಂಟೆಯ ನಂತರ ಯಾವುದೇ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ನಡೆಸಬಾರದು ಎಂದು ತಿಳಿಸಿದ್ದಾರೆ.
ತುಮಕೂರು ನಗರದ ಮೂಲಕ ದೂರದ ಊರುಗಳಿಗೆ ತೆರಳುವವರಿಗೆ ಯಾವುದೇ ರೀತಿಯ ನಿಯಮಗಳನ್ನು ಅಳವಡಿಸುವುದಿಲ್ಲ. ಅವರಿಗೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗುತ್ತದೆ. ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿನ ನಗರಪ್ರದೇಶದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.