ತುಮಕೂರು : ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳಿಗೆ ಈಗಾಗಲೇ ಬಿಡುಗಡೆ ಮಾಡಲಾಗಿರುವ ಅನುದಾನವನ್ನು ಮಾರ್ಚ್ ಅಂತ್ಯದೊಳಗೆ ವಿನಿಯೋಗಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿ ಕುಮಾರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಅನುಮೋದನೆ ನೀಡಿರುವ ಕಾಮಗಾರಿಗಳನ್ನು ಅನುಷ್ಠಾನಕ್ಕೆ ತಂದು, ಶೀಘ್ರವಾಗಿ ಅನುದಾನ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ರೈತರಿಗೆ ಉಪಯೋಗವಾಗುವಂತೆ ಸಾವಯವ ಕೃಷಿ ಬಗ್ಗೆ ತರಬೇತಿ ನೀಡಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಹೋಬಳಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೈಪಿಡಿ ರೂಪಿಸಿ ಅಥವಾ ಭಿತ್ತಿ ಪತ್ರಗಳ ಮೂಲಕ ಹೆಚ್ಚಿನ ಪ್ರಚಾರ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯ ಕೆಂಪ ಚೌಡಯ್ಯ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಓದಿ : ಶಿವಮೊಗ್ಗದಲ್ಲಿ ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿವಿ ಸ್ಥಾಪನೆಗೆ ಒತ್ತಾಯ
ಕೆಲ ವರ್ತಕರು ರಾಗಿ ಖರೀದಿ ಕೇಂದ್ರಗಳಲ್ಲಿ ರಾಗಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ರೈತರಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ. ಹಾಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಈ ಮೂಲಕ ರೈತರಿಗೆ ಅನ್ಯಾಯವಾಗುವುದನ್ನು ತಡೆಗಟ್ಟಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸದೇ ಇರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಪರ್ಯಾಯ ವ್ಯವಸ್ಥೆ ಮಾಡಬೇಕಿದೆ. ಬೇಸಿಗೆ ಸಮೀಪಿಸುತ್ತಿದೆ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ವ್ಯವಸ್ಥೆ ಮಾಡಬೇಕು ಎಂದು ಸಭೆಯಲ್ಲಿ ಸದಸ್ಯರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.