ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ಪೊಲೀಸ್ ಸಿಬ್ಬಂದಿಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇದೆ. ಎಷ್ಟೇ ಮುಂಜಾಗ್ರತಾ ಕ್ರಮ ವಹಿಸಿದರೂ ಪೊಲೀಸರಲ್ಲಿ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿಲ್ಲ.
ನಿನ್ನೆ ಎರಡು ಪೊಲೀಸ್ ಠಾಣೆಯಲ್ಲಿನ ಸಿಬ್ಬಂದಿ ಸೋಂಕಿಗೆ ಒಳಗಾಗಿದ್ದಾರೆ. ಹೀಗಾಗಿ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ತುಮಕೂರು ನಗರ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ತುಮಕೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ಗೆ ಸೋಂಕು ತಗುಲಿದ್ದ ಹಿನ್ನೆಲೆ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಎಲ್ಲ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಅಲ್ಲದೇ ಠಾಣೆಗಳ ಎದುರು ಪ್ರತ್ಯೇಕವಾಗಿ ಶೆಡ್ ಗಳನ್ನು ಹಾಕಿ ಪೊಲೀಸ್ ಸಿಬ್ಬಂದಿ ಅಲ್ಲಿಯೇ ಕುಳಿತು ಸಾರ್ವಜನಿಕರ ವಿಚಾರಣೆ ನಡೆಸುತ್ತಿದ್ದರು. ಹೀಗಿದ್ದರೂ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಐವರು ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುವ ಇಬ್ಬರು ಸಿಬ್ಬಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
ಇನ್ನೊಂದೆಡೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ 37 ವರ್ಷದ ಪೊಲೀಸ್ ಸಿಬ್ಬಂದಿಗೆ ಸೋಂಕು ತಗಲಿದ್ದು, ಎಸ್ಪಿ ಕಚೇರಿಯನ್ನೇ ಸೀಲ್ ಡೌನ್ ಮಾಡಲಾಗಿದೆ. ಇನ್ನು ಕೊರೊನಾ ವಾರಿಯರ್ಸ್ಗಳಾಗಿ ಕೆಲಸ ಮಾಡುತ್ತಿರುವ ಪೊಲೀಸ್ ಸಿಬ್ಬಂದಿ ಇದರಿಂದ ಧೃತಿಗೆಡುವಂತಾಗಿದೆ.