ತುಮಕೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಇಂದು ದಿಢೀರ್ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. ವಿಜಯೇಂದ್ರ ಅವರ ಈ ರೀತಿ ನಡೆ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಇಂದು ಬೆಳಗ್ಗೆ ದಾವಣಗೆರೆಗೆ ಹೋಗಿದ್ದ ವಿಜಯೇಂದ್ರ ಸಂಜೆ ವಾಪಸ್ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ದಿಢೀರ್ ಎಂಬಂತೆ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಲ್ಲದೇ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರೊಂದಿಗೆ ಗೌಪ್ಯ ಮಾತುಕತೆ ನಡೆಸಿದ್ದಾರೆ. ನಂತರ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ಬಳಿ ತೆರಳಿದ ವಿಜಯೇಂದ್ರ, ಪೂಜೆಯಲ್ಲಿ ಪಾಲ್ಗೊಂಡರು.
ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿಜಯೇಂದ್ರ ಅವರೊಂದಿಗೆ ಬಿಜೆಪಿ ಸ್ಥಳೀಯ ಯಾವ ಮುಖಂಡರು ಕೂಡ ಜೊತೆಯಲ್ಲಿ ಇರಲಿಲ್ಲ. ಸ್ಥಳೀಯ ಬಿಜೆಪಿ ಮುಖಂಡರಿಗೂ ಕೂಡ ವಿಜಯೇಂದ್ರ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡುವ ಮಾಹಿತಿ ಲಭ್ಯವಾಗಿರಲಿಲ್ಲ. ಕಾಂಪೋಸ್ಟ್ ಅಭಿವೃದ್ಧಿ ನಿಗಮದ ನಿರ್ದೇಶಕ ಕೆಆರ್ ಸದಾಶಿವಯ್ಯ ಹಾಗೂ ಇಬ್ಬರು ಬೆಂಗಳೂರಿನ ಬಿಜೆಪಿ ಮುಖಂಡರು ಮಾತ್ರ ಈ ಸಂದರ್ಭದಲ್ಲಿ ಅವರಿಗೆ ಸಾಥ್ ನೀಡಿದ್ದರು. ಶ್ರೀಗಳ ಜೊತೆ ವಿಜಯೇಂದ್ರ ಗುಪ್ತವಾಗಿ ನಡೆಸಿರುವ ಮಾತುಕತೆ ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.
ಇದನ್ನೂ ಓದಿ: ಒಳ ಜಗಳದಿಂದಲೇ ಬಿಜೆಪಿ ಸರ್ಕಾರ ಪತನವಾಗಲಿದೆ: ಕಾಂಗ್ರೆಸ್ ಶಾಸಕ ಸಂಗಮೇಶ್ ಭವಿಷ್ಯ
ಇನ್ನು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್, ಬಿವೈ ವಿಜಯೇಂದ್ರ ಉಪಮುಖ್ಯಮಂತ್ರಿ ಆಗುವ ಆಸೆ ಇದೆ. ಇದು ಅವರ ಪಕ್ಷದವರಿಗೆ ಬಿಟ್ಟ ವಿಚಾರ. ಅಧಿಕಾರದ ವ್ಯಾಮೋಹದ ಹಿಂದೆ ಬಿದ್ದು ಬಿ ಎಸ್ ಯಡಿಯೂರಪ್ಪ ಅವರ ಸರ್ಕಾರ ಉರುಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ.