ಉಡುಪಿ: ಜಿಲ್ಲೆಯಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಷಣ ಪರಿಹಾರ ವಿತರಿಸುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗುರುವಾರ ವಿಡಿಯೋ ಕಾನ್ಫೆರೆನ್ಸ್ ಮೂಲಕ ಜಿಲ್ಲೆಯ ಮಳೆ ಹಾನಿ ಹಾಗೂ ಕೋವಿಡ್ ಸ್ಥಿತಿಗತಿ ಕುರಿತು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರೊಂದಿಗೆ ಚರ್ಚೆ ನಡೆಸಿದ ಅವರು, ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ಮನೆಗಳಿಗೆ ತಕ್ಷಣ ಪ್ರಾಥಮಿಕ ಹಂತದ ಪರಿಹಾರ ಬಿಡುಗಡೆ ಮಾಡಿ. ಮನೆ ಹಾನಿಯ ವಿವರ ಕುರಿತು ರಾಜೀವ್ ಗಾಂಧಿ ವಸತಿ ನಿಗಮದ ಪೋರ್ಟಲ್ ನಲ್ಲಿ ಹಾನಿಯಾದ ದಿನವೇ ಅಪ್‌ಲೋಡ್ ಮಾಡುವಂತೆ ಸೂಚಿಸಿದರು.
ಕೃಷಿ ಬೆಳೆ ಹಾನಿ ಪರಿಶೀಲಿಸಲು ತಾಲೂಕುವಾರು ಕಂದಾಯ, ಕೃಷಿ ಮತ್ತು ಪಿಡಿಒ ಒಳಗೊಂಡ ತಂಡಗಳನ್ನು ರಚಿಸಿ, ಹಾನಿಯ ಸಮೀಕ್ಷೆಯನ್ನು ಶೀಘ್ರದಲ್ಲಿ ನಡೆಸಿ, ವರದಿ ಪಡೆದು ಪರಿಹಾರ ನೀಡಲು ಕ್ರಮ ಕೈಗೊಳ್ಳಿ. ಕೃಷಿ ಚಟುವಟಿಕೆಗೆ ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಹೇಳಿದರು.
ಜಿಲ್ಲೆಯಲ್ಲಿ ಈವರೆಗೆ 116 ಮನೆಗಳಿಗೆ ಭಾಗಶಃ ಹಾನಿ ಮತ್ತು 2 ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದು, ಅವುಗಳಿಗೆ ಪರಿಹಾರ ವಿತರಣೆ ಮಾಡಲಾಗಿದೆ. ಪ್ರವಾಹದಿಂದ ಜನರನ್ನು ಸ್ಥಳಾಂತರಿಸುವ ಪರಿಸ್ಥಿತಿ ಜಿಲ್ಲೆಯಲ್ಲಿ ಇಲ್ಲ. ಪ್ರವಾಹ ಸಂಭವವಿರುವ 26 ಗ್ರಾಮಗಳನ್ನು ಗುರುತಿಸಲಾಗಿದ್ದು, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲಾ ಅಧಿಕಾರಿಗಳಿಗೆ ಕೇಂದ್ರ ಸ್ಥಾನದಲ್ಲಿರಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸಚಿವರಿಗೆ ವಿವರಿಸಿದರು.