ಉಡುಪಿ : ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟ ಘಟನೆ ಶಿರಿಯಾರದ ಕಾಜ್ರಲ್ಲಿ ಸಮೀಪ ಕಲ್ಬೆಟ್ಟು ಎನ್ನುವಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ.

ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಬೆಳಗಿನ ಜಾವ 3 ಗಂಟೆ ಸುಮಾರಿಗೆ ‘ಮಹಾಕಲಿ ಮಗದೇಂದ್ರ’ ಪ್ರಸಂಗದಲ್ಲಿ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ಸಂದರ್ಭ ರಂಗಸ್ಥಳದಲ್ಲೇ ಎದೆ ನೋವಿನಿಂದ ತೀವ್ರ ಅಸ್ವಸ್ಥಗೊಂಡರು.
ನಂತರ ತಕ್ಷಣ ವೇಷ ಕಳಚಿ, ಮೇಳದ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮೇಳದ ಮ್ಯಾನೇಜರ್ ಮತ್ತು ಸಹಕಲಾವಿದರು, ಸ್ಥಳೀಯರು ಜೊತೆಯಾಗಿ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದು ಆಸ್ಪತ್ರೆ ತಲುಪುವಾಗ ಮೃತಪಟ್ಟಿದ್ದಾರೆ.
ಓದಿ: ಫೇಕ್ ವೆಬ್ಸೈಟ್ನಲ್ಲಿ ಉದ್ಯೋಗದ ಆಮಿಷವೊಡ್ಡಿ ವಂಚನೆ : ಸಿಕ್ಕಿಬಿತ್ತು ಖತರ್ನಾಕ್ ಗ್ಯಾಂಗ್
ಪ್ರಸ್ತುತ ಬಾರಕೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದ ಸಾಧು ಕೊಠಾರಿಯವರು ಬಡಗುತಿಟ್ಟಿನ ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದು, ಸುಮಾರು 40 ವರ್ಷಕ್ಕೂ ಹೆಚ್ಚು ಕಾಲ ಯಕ್ಷ ತಿರುಗಾಟ ನಡೆಸಿದ್ದರು.