ಉಡುಪಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಎರಡು ದಿನ ಕರಾವಳಿ ಪ್ರವಾಸ ಕೈಗೊಂಡಿದ್ದು, ಸೋಮವಾರ ಸಂಜೆ 5 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.
ಮುಖ್ಯಮಂತ್ರಿಯಾದ ನಂತರ ಎರಡನೇ ಬಾರಿಗೆ ಕೃಷ್ಣ ಮಠ ಭೇಟಿ ನೀಡುತ್ತಿರುವ ಯಡಿಯೂರಪ್ಪನವರು, ಪರ್ಯಾಯ ಪಂಚ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಸಿಎಂ ಜೊತೆ ಶಾಸಕರು, ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹ ಭಾಗವಹಿಸಲಿದ್ದಾರೆ. ಮಠದ ಕಾರ್ಯಕ್ರಮದ ನಂತರ ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಡುಪಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮಂಗಳವಾರ ಬೆಳಗ್ಗೆ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ನಂತರ ಕಾಪು ತಾಲೂಕಿನ ಹೆಜಮಾಡಿ ಬಂದರಿಗೆ ಭೇಟಿ ನೀಡಿ, ಕಾಮಗಾರಿ ಪರಿಶೀಲನೆ ನಡೆಸಿ ಮಧ್ಯಾಹ್ನ ಕುಂದಾಪುರ ತಾಲೂಕಿನ ಕುಂಭಾಸಿ ಆನೆಗುಡ್ಡೆ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.