ಭಟ್ಕಳ: ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ಸತ್ಯಾಗ್ರಹ ತಹಶೀಲ್ದಾರ್ ಕಚೇರಿ ಮುಂಭಾಗ ನಡೆಯಿತು.
ರಾಜ್ಯದಲ್ಲಿ ಉಂಟಾದ ಭೀಕರ ಪ್ರವಾಹದಿಂದ 22 ಜಿಲ್ಲೆಗಳ ಜನ ಜನಜೀವನ ಅಸ್ತವ್ಯಸ್ತವಾಗಿದೆ. ಅಪಾರ ಪ್ರಮಾಣದ ಆಸ್ತಿಪಾಸ್ತಿ ಜನ-ಜಾನುವಾರುಗಳಿಗೆ ಹಾನಿ ಉಂಟಾಗಿದೆ. ಆದರೂ ಕೇಂದ್ರ ಸರ್ಕಾರದಿಂದ ಬಿಡಿಗಾಸು ಪರಿಹಾರ ಹಣ ಬಿಡುಗಡೆಯಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಭಟ್ಕಳ ತಾಲೂಕು ಬ್ಲಾಕ್ ಕಾಂಗ್ರೆಸ್ ಕಛೇರಿಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ, ಸಂಶುದ್ದೀನ್ ಸರ್ಕಲ್ ಮಾರ್ಗವಾಗಿ ತಹಶೀಲ್ದಾರ್ ಕಚೇರಿವರೆಗೆ ಸಾಗಿ ಬಂತು.
ಬಳಿಕ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆ ಉದ್ದೇಶಿಸಿ ಜೆ.ಡಿ ನಾಯ್ಕ ಮಾತನಾಡಿ, ಉತ್ತರಕನ್ನಡ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿ ಅಪಾರ ಹಾನಿಯಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ. ಕೇಂದ್ರ ಸರ್ಕಾರ ಹಾಗೂ ಅಧಿಕಾರಿಗಳನ್ನು ಎಚ್ಚರಿಸಲು ತಹಶೀಲ್ದಾರ್ ಕಛೇರಿ ಮುಂದೆ ಧರಣಿ ನಡೆಸಿದ್ದೇವೆ ಎಂದರು.
ಮಾಜಿ ಶಾಸಕ ಮಂಕಾಳ ವೈದ್ಯ, ಜೆ.ಡಿ.ನಾಯ್ಕ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೋಗೇರ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸದಸ್ಯರುಗಳು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಧರಣಿಯಲ್ಲಿ ಪಾಲ್ಗೊಂಡಿದ್ದರು.