ಕಾರವಾರ: ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಅಂಕೋಲಾ ತಾಲೂಕಿನ ಹೊಸೂರು ಸೇತುವೆ ಬಳಿ ನಡೆದಿದೆ.
ಭಟ್ಕಳದ ಶಮಾಜ್ ಗೋಲ್ಟೆ (22) ಮೃತಪಟ್ಟ ವಿದ್ಯಾರ್ಥಿ. ಬಾಹ್ಯ ವಿದ್ಯಾರ್ಥಿಗಳಾಗಿರುವ ಇವರು ಭಟ್ಕಳದಿಂದ ಕಾರವಾರದ ಮದರಾ ಪರೀಕ್ಷಾ ಕೇಂದ್ರಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಒಟ್ಟು ಐವರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುವ ಪ್ರದೇಶದಲ್ಲಿ ಕಾರು ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ಪರಿಣಾಮ ಶಮಾಜ್ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಉಳಿದ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.