ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆಕೊಟ್ಟ ಹಿನ್ನೆಲೆಯಲ್ಲಿ ಕಾರವಾರ ನಗರದಲ್ಲಿ ಸಿಐಟಿಯು ಕಾರ್ಯಕರ್ತರು ಇಂದು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಆಶಾ ಕಾರ್ಯಕರ್ತೆಯರು, ಹಾಗೂ ಕಾರ್ಮಿಕ ಸಂಘಟನೆಗಳು ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಕಾರ್ಮಿಕರು ಋಣ ಮುಕ್ತ ಕಾಯ್ದೆ ಜಾರಿ, ಕನಿಷ್ಠ ಬೆಂಬಲ ಬೆಲೆ ಖಾತರಿ, ಪ್ರವಾಹ ಪೀಡಿತರಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ಇನ್ನಿತರ 12 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ನಗರದಲ್ಲಿ ಮುಷ್ಕರಕ್ಕೆ ಯಾವುದೇ ಬೆಂಬಲ ವ್ಯಕ್ತವಾಗದೇ ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದುಕೊಂಡಿದ್ದವು. ಸಾರಿಗೆ ಹಾಗೂ ಆಟೋ-ಟೆಂಪೊ ಸಂಚಾರಗಳು ಎಂದಿನಂತೆ ನಡೆಯಿತು.