ಶಿರಸಿ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರವು ಹೆಚ್ಚಿನ ಸ್ಥಾನವನ್ನು ಗೆಲ್ಲುವುದರಿಂದ ಸಮ್ಮಿಶ್ರ ಸರ್ಕಾರ ಮತ್ತಷ್ಟು ಗಟ್ಟಿಯಾಗಲಿದೆ. ಅದರಿಂದ ರಾಷ್ಟ್ರ ರಾಜಕಾರಣದಲ್ಲಿ ಹೊಸ ಬದಲಾವಣೆ ಆಗಲಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 21ರಲ್ಲಿ ಕಾಂಗ್ರೆಸ್, 7 ರಲ್ಲಿ ಜೆಡಿಎಸ್ ಸ್ಪರ್ಧಿಸುತ್ತಿದ್ದು, ಇವುಗಳಲ್ಲಿ ಗೆಲುವು ಸಾಧಿಸಿದಲ್ಲಿ ಸಮ್ಮಿಶ್ರ ಸರ್ಕಾರ ಗಟ್ಟಿಯಾಗುತ್ತದೆ ಹಾಗೂ ದೇಶದ ರಾಜಕಾರಣದಲ್ಲಿ ಹೊಸ ಬದಲಾವಣೆ ಬರುತ್ತದೆ. ಆ ನಿಟ್ಟಿನಲ್ಲಿ ನಮ್ಮ ಕ್ಷೇತ್ರದಲ್ಲಿಯೂ ಮೈತ್ರಿ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಗೆಲುವಿಗೆ ಶ್ರಮಿಸುತ್ತಿದ್ದೇವೆ ಎಂದರು.
ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಅಭ್ಯರ್ಥಿ ಆಗಿರುವ ಆನಂದ್ ಅಸ್ನೋಟಿಕರ್ ಅವರು ಸಮಯದ ಅಭಾವ ಇರುವ ಕಾರಣ ಐದು ಪಂಚಾಯತ್‌ಗಳನ್ನು ಒಗ್ಗೂಡಿಸಿ ಪ್ರಚಾರ ಮಾಡುತ್ತಿದ್ದಾರೆ. ನಮ್ಮ ಉದ್ದೇಶ ಕರ್ನಾಟಕ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಹೆಚ್ಚಿನ ಅಭ್ಯರ್ಥಿಗಳು ಗೆಲ್ಲಿಸುವುದಾಗಿದೆ ಎಂದರು.
ಅಸಮಧಾನವಿಲ್ಲ :
ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಅವರಿಗೆ ಯಾವುದೇ ಅಸಮಧಾನವಿಲ್ಲ. ಅವರಿಗೆ ಬೆಳಗಾವಿ ವಿಭಾಗದ ಉಸ್ತುವಾರಿ ಜೊತೆಗೆ ಧಾರವಾಡ ಜಿಲ್ಲೆಯ ಉಸ್ತುವಾರಿ ನೀಡಿರುವ ಕಾರಣ ಅವರು ಪ್ರಚಾರದಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ಏ.17 ರಂದು ಪ್ರಚಾರಕ್ಕೆ ಆಗಮಿಸುತ್ತಾರೆ. ಮುಖ್ಯಮಂತ್ರಿಗಳೂ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅಭ್ಯರ್ಥಿ ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇವೆ ಎಂದರು.