ಶಿರಸಿ: ಉತ್ತರ ಕನ್ನಡ ಜಿಲ್ಲೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಮುಖರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಕಾಂಗ್ರೆಸ್ಸಿಗರ ಅಸಮಾಧಾನದ ನಡುವೆಯೂ ಶಿರಸಿಯಲ್ಲಿ ಸಭೆ ನಡೆಸಿ, ಹೊಂದಾಣಿಕೆ ರಾಜಕೀಯಕ್ಕೆ ದೋಸ್ತಿ ಪ್ರಮುಖರು ಮುಂದಾಗಿದ್ದಾರೆ.
ಉತ್ತರ ಕನ್ನಡ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯಿಂದ ಉಂಟಾದ ಭಿನ್ನಮತ ಶಮನದ ಹಿನ್ನೆಲೆಯಲ್ಲಿ ಶಿರಸಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಜಂಟಿ ಸಭೆ ನಡೆಸಲಾಯಿತು. ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಉಂಟಾಗಿದ್ದ ಈವರೆಗಿನ ಭಿನ್ನಾಭಿಪ್ರಾಯ ಹಾಗೂ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ನಡೆಯಿತು.
ಇನ್ನು ಕಾಂಗ್ರೆಸ್ ನಾಯಕರ ಮನದೊಳಗೆ ಟಿಕೆಟ್ ಕೈ ತಪ್ಪಿದ ಬಗ್ಗೆ ಕೋಪ ಇದ್ದರೂ ವೇದಿಕೆಯಲ್ಲಿ ನಗುಮೊಗದಿಂದ ಒಗ್ಗಟ್ಟಿನ ಜಪ ಮಾಡಿದರು. ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಪಕ್ಷದ ಕಾರ್ಯಕರ್ತರಿಗೆ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಬೆಂಬಲಿಸುವಂತೆ ಹೇಳಿದರು. ನಮ್ಮ ಪಕ್ಷದ ಯಾವುದೇ ಕಾರ್ಯಕರ್ತನಿಗೆ ಒಂದೊಮ್ಮೆ ಅವಮಾನವಾದರೂ ಸಹಿಸುವುದಿಲ್ಲ ಎಂದು ಖಡಕ್ಕಾಗಿ ಹೇಳಿದರು.