ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾರ್ಚ್ ವೇಳೆಗೆ ಕಾಣಿಸಿಕೊಂಡಿದ್ದ ಸೋಂಕು ಕಳೆದೆರಡು ತಿಂಗಳಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಆತಂಕಕ್ಕೆ ಕಾರಣವಾಗಿತ್ತು. ಆದರೆ ಇದೀಗ ಜಿಲ್ಲಾಡಳಿತ ಕೈಗೊಂಡ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಫಲವಾಗಿ ಜಿಲ್ಲೆಯಲ್ಲಿ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಕೋವಿಡ್-19 ಸೋಂಕು ಸಮುದಾಯಕ್ಕೆ ಹರಡದಂತೆ ಹಾಗೂ ಸೋಂಕಿಗೊಳಗಾದವರು ಸಾವನ್ನಪ್ಪದಂತೆ ಸೂಕ್ತ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚಿನ ಗಮನವಹಿಸಿದೆ. ಜೊತೆಗೆ ಸೋಂಕು ಪತ್ತೆಗಾಗಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸುತ್ತಿದ್ದು ಈ ಮೂಲಕ ರಾಜ್ಯದಲ್ಲೇ ಅತ್ಯಂತ ಕಡಿಮೆ ಅಂದರೆ ಶೇ 5 ರಿಂದ 6 ರಷ್ಟು ಸೋಂಕು ಪತ್ತೆಯಾಗುತ್ತಿದೆ.
ಇದುವರೆಗೂ ಜಿಲ್ಲೆಯಲ್ಲಿ ಸುಮಾರು 46,406 ಕ್ಕೂ ಅಧಿಕ ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದ್ದು, 3,368 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಈಗಾಗಲೇ 2,420 ಮಂದಿ ಸಂಪೂರ್ಣ ಗುಣಮುಖರಾಗಿದ್ದು, 33 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಕನ್ನಡ ಜಿಲ್ಲೆ ಕೊರೊನಾ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಜಿಲ್ಲಾಧಿಕಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೊರೊನಾ ವಿಚಾರದಲ್ಲಿ ಜನರು ನಿರ್ಲಕ್ಷ್ಯವಹಿಸದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸುತ್ತಿದೆ. ಆದರೆ ಇತ್ತ ಸಂಸದ ಅನಂತ ಕುಮಾರ ಹೆಗಡೆ ಕೊರೊನಾ ಕೇವಲ ಸಾಮಾನ್ಯ ಜ್ವರ. ಇದನ್ನು ಆಸ್ಪತ್ರೆಗಳು, ಔಷಧ ಕಂಪನಿಗಳು ದಂಧೆಯಾಗಿಸಿಕೊಂಡಿವೆ ಎಂದು ನೀಡಿರುವ ಹೇಳಿಕೆಯನ್ನು ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದಾರೆ. ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಸಹ ಕೇಳಿಬಂದಿದೆ.
ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದಲ್ಲಿದೆ ಅಂದಮಾತ್ರಕ್ಕೆ ಸುರಕ್ಷತಾ ಕ್ರಮಗಳನ್ನ ಜನರು ಮರೆಯದೇ ಪಾಲನೆ ಮಾಡಬೇಕು. ಕೊರೊನಾ ಸಂಪೂರ್ಣ ಮುಕ್ತವಾಗುವವರೆಗೂ ಮುಂಜಾಗ್ರತೆಯನ್ನ ವಹಿಸಲೇಬೇಕು ಎಂದು ಜಿಲ್ಲಾಧಿಕಾರಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.