ಕಾರವಾರ: ಸಮ್ಮಿಶ್ರ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ಕ್ಷೇತ್ರದ ಅಭಿವೃದ್ಧಿಗೆ ಸ್ಪಂದನೆ ಸಿಗುತ್ತಿಲ್ಲ ಎಂಬ ಬಂಡಾಯ ಶಾಸಕ ಶಿವರಾಮ್ ಹೆಬ್ಬಾರ್ ಆರೋಪಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತಿರುಗೇಟು ನೀಡಿದ್ದಾರೆ.
ತಮ್ಮ ಫೇಸ್ಬುಕ್ ಪೇಜ್ನಲ್ಲಿ ಶಿವರಾಮ್ ಹೆಬ್ಬಾರ್ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಅವರು, ಕ್ಷೇತ್ರದ ಜನಪ್ರತಿನಿಧಿಯಾಗಿ, ಜಿಲ್ಲಾ ಉಸ್ತುವಾರಿ ಸಚಿವನಾಗಿ ಕ್ಷೇತ್ರದ ಹಾಗೂ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ನನ್ನ ಇತಿಮಿತಿಯಲ್ಲಿ ಶಕ್ತಿ ಮೀರಿ ಶ್ರಮಿಸಿದ್ದೇನೆ. ತತ್ಪರಿಣಾಮ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳು ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಇದು ಜಿಲ್ಲೆಯ ಎಲ್ಲಾ ಜನಸಾಮಾನ್ಯರಿಗೂ ತಿಳಿದಿದೆ. ಅಲ್ಲದೆ ಇದು ಮಾನ್ಯ ಶಾಸಕರಿಗೂ ತಿಳಿದಿದೆ.
ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ ಎಂಬುದನ್ನು ಸ್ವತಃ ಶಾಸಕರಾದ ಶಿವರಾಮ ಹೆಬ್ಬಾರ್ ಅವರೇ ಹಲವಾರು ಸಂದರ್ಭಗಳಲ್ಲಿ ಸಾರ್ವಜನಿಕವಾಗಿಯೇ ಹೇಳಿದ್ದಾರೆ. ನಾನು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಭಾವನೆಗಳಿಗೂ ಸಹ ಸಕರಾತ್ಮಕವಾಗಿ ಸ್ಪಂದಿಸಿದ್ದೇನೆ. ಹಾಗಾಗಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರು ತಮ್ಮ ವೈಯಕ್ತಿಕ ಆಸೆ, ಆಕಾಂಕ್ಷೆಗಳಿಂದ ಪ್ರೇರಿತರಾಗಿ ಕೈಗೊಂಡ ಯಾವುದೇ ತೀರ್ಮಾನಗಳಿಗೆ ಪಕ್ಷವನ್ನಾಗಲಿ ಅಥವಾ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಲಿ ಹೊಣೆಗಾರರನ್ನಾಗಿಸುವುದು ಸೂಕ್ತವಲ್ಲ ಎಂದು ಈ ಸಂದರ್ಭದಲ್ಲಿ ನಾನು ಹೇಳಲಿಚ್ಚಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.