ಶಿರಸಿ (ಉತ್ತರ ಕನ್ನಡ): ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾಗೂ ಶಿರಸಿ ಸಹಾಯಕ ಆಯುಕ್ತರನ್ನು ಅವಧಿ ಪೂರ್ವ ವರ್ಗಾವಣೆ ಮಾಡಿರುವುದನ್ನು ಖಂಡಿಸಿ ರೈತ ಸಂಘದ ವತಿಯಿಂದ ತಾಲೂಕಿನ ದಾಸನಕೊಪ್ಪದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಪ್ರಮುಖರು ಪ್ರತಿಭಟನೆ ನಡೆಸಿದರು. ರೈತರಿಗೆ ತಕ್ಷಣ ಯೂರಿಯಾ ಒದಗಿಸಬೇಕು, ಅತಿವೃಷ್ಟಿಯಿಂದ ಹಾಳಾದ ಬೆಳೆಗಳಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಸುಮಾರು ಅರ್ಧ ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಎಮ್.ಆರ್. ಕುಲಕರ್ಣಿ ಮುಖಾಂತರ ತಮ್ಮ ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಕಿರವತ್ತಿ ಮಾತನಾಡಿ, ರೈತರಿಗೆ ಯೂರಿಯಾ ರಸಗೊಬ್ಬರ ಪೂರೈಸಬೇಕು. ಅತಿವೃಷ್ಟಿಯಿಂದ ಹಾಳಾದ ಬೆಳೆಗಳ ಪರಿಶೀಲನೆ ನಡೆಸಿ, ಪರಿಹಾರ ಒದಗಿಸಬೇಕು ಹಾಗೂ ಮನೆಗಳ ನಿರ್ಮಾಣ ಮಾಡಿಕೊಡಬೇಕು. ರೈತರ ಕಂತಿನ ಸಾಲ ತುಂಬುವ ಅವಧಿ ಮುಂದೂಡಬೇಕು. ಲಾಕ್ಡೌನ್ ಸಂದರ್ಭದಲ್ಲಿ ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಹಣವನ್ನು ಆರ್.ಟಿ.ಸಿಯಲ್ಲಿ ನಮೂದು ಬೆಳೆ ಇಲ್ಲದೇ ಹೋದರೂ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ನೀಡಬೇಕು ಹಾಗೂ ಹಿಂದಿನ ಅವಧಿಯ ವಿಮಾ ಹಣ ತಕ್ಷಣ ಜಮಾ ಮಾಡಬೇಕು ಎಂದು ಆಗ್ರಹಿಸಿದರು.
ಶಿರಸಿಯ ಹಿಂದಿನ ಉಪ ವಿಭಾಗಾಧಿಕಾರಿಯಾಗಿದ್ದ ಡಾ. ಈಶ್ವರ ಉಳ್ಳಾಗಡ್ಡಿ ಅವರು, ಕೊರೊನಾ ಸಂದರ್ಭದಲ್ಲಿ ಮುತುವರ್ಜಿ ವಹಿಸಿ ಕೆಲಸ ಮಾಡಿದ್ದರು. ಕಳೆದ ವರ್ಷದ ನೆರೆಯನ್ನೂ ಸಮರ್ಥವಾಗಿ ನಿಭಾಯಿಸಿದ್ದರು. ರೈತರು ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದ ಅವರನ್ನು ಅವಧಿಪೂರ್ಣ ವರ್ಗಾವಣೆ ಮಾಡಿದ್ದು, ಅದನ್ನು ರದ್ದುಗೊಳಿಸಿ, ಅವರ ಸೇವೆಯನ್ನು ಉತ್ತರ ಕನ್ನಡ ಜಿಲ್ಲೆಗೆ ಮತ್ತೆ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.