ಕಾರವಾರ: ಫ್ಲೆಕ್ಸ್ ಪ್ರಿಂಟರ್ ಮಳಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಹೊನ್ನಾವರ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಗಣಪತಿ ಪ್ಲೆಕ್ಸ್ ಪ್ರಿಂಟರ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊಗೆಯಿಂದ ಆವೃತ್ತಗೊಂಡಿತ್ತು. ಸ್ಥಳೀಯರು ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ತಿಳಿಸಿ, ಬೆಂಕಿ ನಂದಿಸಲು ಪ್ರಯತ್ನಿಸಿದ್ದರಾದರೂ ಪ್ರಯೋಜನವಾಗಲಿಲ್ಲ. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.
ಬೆಂಕಿ ಆರಿಸುವಷ್ಟರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರಗಳು ಹಾಗೂ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದವು. ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಶಶಿಕುಮಾರ್, ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಿದ್ದಾರೆ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.