ಕಾರವಾರ: ನಿಂತ ಲಾರಿ ಮೇಲೆ ಗುಡ್ಡ ಕುಸಿದು ಲಾರಿ ಚಾಲಕ ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಅಂಕೋಲಾ ಕಡೆ ಬರುತ್ತಿದ್ದ ಲಾರಿಯೊಂದನ್ನು ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ಆದರೆ ಗುಡ್ಡದಿಂದ ಭಾರಿ ಪ್ರಮಾಣದ ಮಣ್ಣು ಹಾಗೂ ಮರಗಳು ಲಾರಿ ಮೇಲೆಯೇ ಕುಸಿದು ಬಿದ್ದ ಕಾರಣ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಚಾಲಕ ಗಾಯಗೊಂಡಿದ್ದು, ತಕ್ಷಣ ಆತನನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಗಾಗಲೇ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ಗುಡ್ಡ ತೆರವಿಗೆ ಕ್ರಮ ಕೈಗೊಂಡಿದ್ದಾರೆ.
ಈ ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಉದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿವೆ. ಉತ್ತರಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನದಿಂದ ಎಡಬಿಡದೆ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66 ಮತ್ತು 63 ರ ಕೆಲ ಭಾಗಗಳಲ್ಲಿ ಗುಡ್ಡ ಕುಸಿತ ಮುಂದುವರಿಯಲಿದೆ ಎನ್ನಲಾಗಿದೆ.