ಕಾರವಾರ (ಉ.ಕ) : ಸರ್ಕಾರದ ನಿಯಮಾವಳಿ ಪ್ರಕಾರ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ್ರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ. ಹರೀಶ್‌ಕುಮಾರ್ ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪವಿಭಾಗಧಿಕಾರಿ, ತಹಶೀಲ್ದಾರ್, ತಾಲೂಕು ಪಂಚಾಯತ್ ಇಒ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಕೋವಿಡ್-19 ಕುರಿತು ವಿಡಿಯೋ ಸಂವಾದ ನಡೆಸಿದ್ದಾರೆ. ಈ ವೇಳೆ ಮಾತನಾಡಿ, ವ್ಯಕ್ತಿ ಮರಣಹೊಂದಿದಾಗ ಸರ್ಕಾರದ ನಿಯಮಾನುಸಾರ ಆ ವ್ಯಕ್ತಿಯ ಶವಸಂಸ್ಕಾರವನ್ನು ಕೈಗೊಳ್ಳುವ ಅಧಿಕಾರ ಸ್ಥಳೀಯ ಸಂಸ್ಥೆ ಮತ್ತು ಅಧಿಕಾರಿಗಳಿಗಿದ್ದು, ಇದನ್ನು ವಿರೋಧಿಸುವವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕೋವಿಡ್-19ಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಇದ್ದು, ಯಾವುದೇ ವ್ಯಕ್ತಿಯಲ್ಲಿ ಕೊರೊನಾ ಕಂಡುಬಂದಲ್ಲಿ ಸ್ಥಳೀಯವಾಗಿ ಚಿಕಿತ್ಸೆ ನೀಡಬೇಕು ಮತ್ತು ಇದರೊಂದಿಗೆ ಇತರೆ ಕಾಯಿಲೆಗಳಿದ್ದಲ್ಲಿ ತ್ವರಿತವಾಗಿ ಆ ರೋಗಕ್ಕೆ ಚಿಕಿತ್ಸೆ ನೀಡಬೇಕು ಎಂದರು. ರೋಗಿಯು ತೀವ್ರ ಸಮಸ್ಯೆಯಿಂದ ಬಳಲುತ್ತಿದ್ರೆ ಮಾತ್ರ ಕಾರವಾರ ವೈದ್ಯಕೀಯ ಸಂಸ್ಥೆಯ ಕೋವಿಡ್ ವಾರ್ಡ್ಗೆ ಕಳುಹಿಸಲು ಸೂಚಿಸಲಾಗಿದೆ ಎಂದರು.
ಪ್ರತಿ ರೋಗಿಯ ಬಗ್ಗೆ ಲಕ್ಷ್ಯವಹಿಸಿ ಚಿಕಿತ್ಸೆ ಕೊಡಿಸಬೇಕು. ಇದರಲ್ಲಿ ವಿಫಲವಾದಲ್ಲಿ ಎಸಿ ಮತ್ತು ತಹಶೀಲ್ದಾರರು ನೇರ ಹೊಣೆಗಾರರಾಗುತ್ತೀರಿ ಎಂದರು. ಅಲ್ಲದೆ ಇನ್ಮುಂದೆ ಹೊರಗಡೆಯಿಂದ ಬಂದವರಿಗೆ ಹೋಮ್ ಕ್ವಾರಂಟೈನ್ ಕಡ್ಡಾಯವಾಗಿದೆ. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.