ಶಿರಸಿ/ಉತ್ತರ ಕನ್ನಡ: ಜಿಲ್ಲೆಯ ಸಿದ್ದಾಪುರ ತಾಲೂಕಿನ ಗಿಳಸೆ ಗ್ರಾಮದಲ್ಲಿ ವೃದ್ಧ ವ್ಯಕ್ತಿಯೊಬ್ಬರು ಮಂಗನ ಕಾಯಿಲೆಯಿಂದ ಮೃತಪಟ್ಟಿರುವುದು ದೃಢಪಟ್ಟಿದೆ.
ಗಿಳಸೆ ಗ್ರಾಮದ ಭಾಸ್ಕರ್ ಗಣಪತಿ ಹೆಗಡೆ (64) ಮೃತಪಟ್ಟವರೆಂದು ಗುರುತಿಸಲಾಗಿದೆ.
ಕೆಲ ದಿನಗಳ ಹಿಂದೆ ಸಿದ್ದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಭಾಸ್ಕರ್ ಹೆಗಡೆಗೆ ಮಂಗನ ಕಾಯಿಲೆ ಇರುವುದು ಆರೋಗ್ಯ ಇಲಾಖೆ ಮೂಲಗಳಿಂದ ಖಚಿತವಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಅವರನ್ನು ದಾಖಲಿಸಲಾಗಿತ್ತು. ಆದರೆ ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸಿದ ಕಾರಣ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಅವರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಹರೀಶ್ ಕುಮಾರ್ ತಿಳಿಸಿದ್ದಾರೆ.
ಸಿದ್ದಾಪುರದ ಕ್ಯಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ. ಈ ಕುರಿತು ಜಿಲ್ಲಾಡಳಿತ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ. ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಲಸಿಕೆಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.