ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಅಂಕೋಲಾ ಸೇರಿದಂತೆ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
ಕಳೆದ ಎರಡು ದಿನಗಳಿಂದ ಜಿಲ್ಲೆಯ ಕರಾವಳಿ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಪರಿಣಾಮ ಅಂಕೋಲಾದ ಸುಂಕಸಾಳ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೀರು ತುಂಬಿಕೊಂಡಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಈಗಾಗಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಇನ್ನು ಯಲ್ಲಾಪುರದಲ್ಲಿ ಬೇಡ್ತಿ ನದಿ ತುಂಬಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿರುವ ಮನೆ ಹಾಗೂ ಜಮೀನುಗಳಿಗೆ ನೀರು ನುಗ್ಗಿದೆ. ಎಡಬಿಡದೇ ಗಾಳಿ ಸಹಿತ ಮಳೆ ಮುಂದುವರಿದಿದ್ದು, ಬಹುತೇಕ ನದಿಗಳು ತುಂಬಿ ಹರಿಯತೊಡಗಿವೆ. ಕದ್ರಾ ಜಲಾಶಯದಲ್ಲಿ ಸಹ 32 ಮೀಟರ್ ನೀರು ಭರ್ತಿಯಾಗಿದ್ದು, ಗರಿಷ್ಠ ಮಟ್ಟ ತಲುಪಲು ಇನ್ನು 2.35 ಮೀಟರ್ ಬಾಕಿ ಉಳಿದಿದೆ. ಕಳೆದ ವರ್ಷದಂತೆ ಈ ಬಾರಿ ಕೂಡ ಉತ್ತಮ ಪ್ರಮಾಣದಲ್ಲಿ ಮಳೆಯಾಗುತಿದ್ದು, ಕೆಲ ದಿನಗಳ ಕಾಲ ಮಳೆ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.