ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಜನರಿಗೆ ಬಹುಮುಖ್ಯ ಆಗಿರುವ ಡಾ. ಕಸ್ತೂರಿ ರಂಗನ್ ವರದಿ ಬಗ್ಗೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ರಚಿಸಿರುವ ಸಚಿವ ಸಂಪುಟದ ಉಪ ಸಮಿತಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ರಾಜ್ಯದ ರಾಷ್ಟ್ರೀಯ ಉದ್ಯಾನ ಮತ್ತು ವನ್ಯಜೀವಿಧಾಮಗಳ ಸುತ್ತಮುತ್ತಲಿನ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಲು ಸೂಕ್ತ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಮತ್ತು ಇತರ ವಿಷಯಗಳು ಈ ಉಪಸಮಿತಿಯ ಅಡಿ ಬರಲಿವೆ. ಸಚಿವ ಆನಂದ ಸಿಂಗ್ ಅಧ್ಯಕ್ಷತೆಯಲ್ಲಿ ಹೆಬ್ಬಾರ್ ಸದಸ್ಯರಾಗಿದ್ದಾರೆ.
ರಾಜ್ಯ ಸರ್ಕಾರ ಈ ಸಮಿತಿಗೆ ಮಹತ್ವದ ಜವಾಬ್ದಾರಿ ನೀಡಿದ್ದು, ಡಾ. ಕಸ್ತೂರಿ ರಂಗನ್ ವರದಿ ಹಾಗೂ ಇನ್ನಿತರ ವಿಷಯಕ್ಕೆ ಸಂಬಂಧಿಸಿದ ನಿರ್ಧಾರವನ್ನು ತೆಗೆದುಕೊಳ್ಳುವುದಕ್ಕೆ ಈ ಸಮಿತಿಯು ನಿರ್ಣಾಯಕ ಪಾತ್ರವನ್ನು ವಹಿಸಲಿದೆ. ಜಿಲ್ಲೆಯಲ್ಲಿ ನೂರಾರು ಗ್ರಾಮಗಳು ಕಸ್ತೂರಿ ರಂಗನ್ ವರದಿಯಿಂದ ಆತಂಕ ಹೊಂದಿರುವ ಕಾರಣ, ಹೆಬ್ಬಾರ್ ಅವರ ನೇಮಕ ಮಹತ್ವದ್ದಾಗಿದೆ ಎಂದು ವಿಶ್ಲೇಷಿಸಲಾಗಿದೆ.