ಶಿರಸಿ: ಹೊಸಪೇಟೆ ಶಾಸಕ ಆನಂದ್ ಸಿಂಗ್ ರಾಜೀನಾಮೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ನಿಗೂಢ ಸ್ಥಳಕ್ಕೆ ತೆರಳಿದ್ದಾರೆ ಎಂಬ ಚರ್ಚೆ ಎಲ್ಲೆಡೆ ಪ್ರಾರಂಭವಾಗಿದೆ.
ಯಲ್ಲಾಪುರ - ಮುಂಡಗೋಡ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದ್ದು, ಶಾಸಕರು ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿ ನಿಗೂಢ ಸ್ಥಳಕ್ಕೆ ತೆರಳಿದ್ದಾರೆ. ಮಂತ್ರಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬಹಿರಂಗವಾಗಿ ಶಾಸಕ ಹೆಬ್ಬಾರ್ ಅಸಮಾಧಾನ ಹೊರಹಾಕಿದ್ದರು. ಈ ಮೊದಲೂ ಸಹ ಆಪರೇಷನ್ ಕಮಲದಲ್ಲಿ ಅವರ ಹೆಸರು ಕೇಳಿ ಬಂದಿತ್ತು. ಆದರೆ ಸ್ಪಷ್ಟನೆ ನೀಡಿದ್ದ ಅವರು ಬಿಜೆಪಿಗೆ ತೆರಳುವುದಿಲ್ಲ ಎಂದಿದ್ದರು. ಆದರೆ ಈಗ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ.
ಕಳೆದ ಒಂದು ತಿಂಗಳ ಹಿಂದೆ ನಡೆದ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನಿರೀಕ್ಷಿಸಿದ್ದ ಅವರಿಗೆ ನಿರಾಸೆಯಾಗಿತ್ತು. ಆದ್ದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿಬರುತ್ತಿವೆ.