ಕಾರವಾರ: ರಾಜ್ಯದ ಕರಾವಳಿಗೆ ಹೊಂದಿಕೊಂಡಿರುವ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರಕನ್ನಡ ಜಿಲ್ಲೆ ಅಭಿವೃದ್ಧಿ ವಿಚಾರದಲ್ಲಿ ಹಿಂದುಳಿದಿದೆ. ರೋಗಿಗಳಿಗೆ ಚಿಕಿತ್ಸೆ ನೀಡಲು ಜಿಲ್ಲೆಯಲ್ಲಿ ಸುಸಜ್ಜಿತ ತುರ್ತು ಚಿಕಿತ್ಸಾ ಆಸ್ಪತ್ರೆಗಳು ಇಲ್ಲದಿರುವುದು ಅಭಿವೃದ್ಧಿ ಕೊರತೆಗೆ ಹಿಡಿದ ಕೈಗನ್ನಡಿಯಂತಿದೆ.
ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸಚಿವ ಶ್ರೀಪಾದ ನಾಯ್ಕ ಅವರ ಕಾರು ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ವೇಳೆ ಚಿಕಿತ್ಸೆಗೆ ವ್ಯವಸ್ಥೆಯಿಲ್ಲದೇ ಪಕ್ಕದ ರಾಜ್ಯ ಗೋವಾಕ್ಕೆ ಕರೆದೊಯ್ಯುವಂತಾಯಿತು. ಈ ಬೆನ್ನಲ್ಲೇ ಜಿಲ್ಲೆಯಲ್ಲಿ ಸುಸಜ್ಜಿತ ತುರ್ತು ಚಿಕಿತ್ಸಾ ಆಸ್ಪತ್ರೆ ನಿರ್ಮಿಸಬೇಕೆಂಬ ಕೂಗು ಕೇಳಿಬಂದಿದೆ. 12 ತಾಲೂಕುಗಳನ್ನ ಒಳಗೊಂಡಿರುವ ಜಿಲ್ಲೆಯಲ್ಲಿ ತುರ್ತು ಚಿಕಿತ್ಸೆ ನೀಡುವ ವ್ಯವಸ್ಥೆಯುಳ್ಳ ಒಂದೇ ಒಂದು ಆಸ್ಪತ್ರೆಯೂ ಇಲ್ಲ. ಪ್ರತಿಬಾರಿ ಜಿಲ್ಲೆಯ ಜನ ತೀವ್ರ ಅನಾರೋಗ್ಯಕ್ಕೆ ತುತ್ತಾದಲ್ಲಿ, ಭೀಕರ ಅಪಘಾತಕ್ಕೆ ಗುರಿಯಾದ ಸಂದರ್ಭದಲ್ಲಿ ಜೀವ ಕೈಯಲ್ಲಿ ಹಿಡಿದು ನೆರೆಯ ಜಿಲ್ಲೆ, ರಾಜ್ಯಗಳತ್ತ ಮುಖಮಾಡಬೇಕಾಗಿದೆ.
ಇದನ್ನೂ ಓದಿ: ಉಡುಪಿ: ಬೀಚ್ನಲ್ಲಿ ಗಮನ ಸೆಳೆದ 'ವೆಲ್ಕಮ್ ವ್ಯಾಕ್ಸಿನ್' ಮರಳು ಶಿಲ್ಪ
ಅದೆಷ್ಟೋ ಬಾರಿ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಲಭ್ಯವಾಗದೆ ಸಾಕಷ್ಟು ಮಂದಿ ಆಸ್ಪತ್ರೆಗಳಿಗೆ ತೆರಳುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಲೇ ಇದೆ. ಕಳೆದ 6-7 ವರ್ಷಗಳಿಂದ ಜಿಲ್ಲೆಯ ಕರಾವಳಿಯಲ್ಲಿ ಹೆದ್ದಾರಿ ಅಗಲೀಕರಣ ಕಾರ್ಯ ನಡೆಯುತ್ತಿದ್ದು, ಅಪಘಾತಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದ ಸರ್ಕಾರ ಈ ಕೂಡಲೇ ಎಚ್ಚೆತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕಿ ರೂಪಾಲಿ ನಾಯ್ಕ, ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳೊಂದಿಗೆ ಈ ಕುರಿತು ಚರ್ಚಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಮಂಜೂರಾಗುವ ಭರವಸೆಯನ್ನ ವ್ಯಕ್ತಪಡಿಸಿದ್ದಾರೆ ಎಂದರು.
ಪ್ರವಾಸಿ ಸ್ಥಳಗಳನ್ನು ಹೊಂದಿರುವ ಉತ್ತರಕನ್ನಡ ಜಿಲ್ಲೆಯಲ್ಲಿ ಆದಷ್ಟು ಬೇಗ ಸರ್ಕಾರ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿಲ್ಲೆಯ ಜನರು ಒತ್ತಾಯಿಸಿದ್ದಾರೆ.