ಭಟ್ಕಳ: ತಾಲೂಕಿನಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ರೋಗ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಹೊರ ಭಾಗದಿಂದ ಯಾರೂ ಬರಬಾರದೆಂದು ಜಿಲ್ಲಾಧಿಕಾರಿ ಡಾ. ಕೆ.ಹರೀಶಕುಮಾರ್ ಆದೇಶಿಸಿದ್ದಾರೆ.
ಆದೇಶದನ್ವಯ, ಸಾರ್ವಜನಿಕರು ವೈದ್ಯಕೀಯ ಕಾರಣಕ್ಕೆ ಬಿಟ್ಟು ಇತರ ಯಾವುದೇ ಕಾರಣಕ್ಕೆ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಹೊರಗಡೆ ಸಂಚರಿಸುವಂತಿಲ್ಲ ಎಂದು ಆದೇಶಿಸಿದ್ದಾರೆ.
ಉಳಿದಂತೆ ಹಳೆಯ ಆದೇಶದಲ್ಲಿದ್ದಂತೆ ಯಾವುದೇ ಕಾರಣಕ್ಕೂ ಭಟ್ಕಳ ಉಪ ವಿಭಾಗಾಧಿಕಾರಿ ಅಥವಾ ಸಹಾಯಕ ಪೊಲೀಸ್ ಅಧೀಕ್ಷಕರ ಪೂರ್ವಾನುಮತಿ ಪಡೆಯದೆ 70 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನವರು, ಗರ್ಭಿಣಿಯರು, ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿಗಳು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಿಂದ ಹೊರ ಬರುವಂತಿಲ್ಲ.
ಕೋವಿಡ್-19 ರೋಗ ಲಕ್ಷಣ ಹೊಂದಿರುವವರು ಕಡ್ಡಾಯವಾಗಿ ಸರ್ಕಾರವು ನಿರ್ದಿಷ್ಟಪಡಿಸಿದ ಫೀವರ್ ಕ್ಲಿನಿಕ್ಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಬೇಕು. ತಪ್ಪಿದಲ್ಲಿ ಸಂಬಂಧಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಜುಲೈ 10ರಿಂದ ಮುಂದಿನ ಆದೇಶ ಬರುವವರೆಗೆ ಹೊರ ದೇಶ, ಹೊರ ರಾಜ್ಯ, ಹೊರ ಜಿಲ್ಲೆ ಮತ್ತು ಹೊರ ತಾಲೂಕುಗಳಿಂದ ವಾಸ್ತವ್ಯದ ಉದ್ದೇಶಕ್ಕಾಗಿ ಭಟ್ಕಳಕ್ಕೆ ಬರುವುದನ್ನು ಸಂಪೂರ್ಣ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.