ಭಟ್ಕಳ: ತಾಲೂಕಿನಲ್ಲಿ ಕೊರೊನಾ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸುವ ಸಂಬಂಧ ಸಹಾಯಕ ಆಯುಕ್ತ ಎಸ್.ಭರತ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್.ಭರತ್, ನವೆಂಬರ್ 1ರಂದು ನಗರದ ತಾಲೂಕು ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಕೋವಿಡ್ ಹಿನ್ನೆಲೆ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ಆಯೋಜಿಸಬೇಕೆಂದು ಸೂಚನೆ ನೀಡಿದರು.
ಅಲ್ಲದೆ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚುನಾವಣೆ ಇರುವುದರಿಂದ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದನ್ನು ಪಾಲಿಸಬೇಕಿದೆ. ಹೀಗಾಗಿ ಆದಷ್ಟು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಕನ್ನಡ ತಾಯಿಯ ಹಬ್ಬವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.
ಸಭೆಯಲ್ಲಿ ತಹಶೀಲ್ದಾರ್ ರವಿಚಂದ್ರ, ತಾಲೂಕ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಬಿಇಒ ದೇವಿದಾಸ ಮೊಗೇರ, ಭಟ್ಕಳ ಜಯ ಕರ್ನಾಟಕ ಸಂಘದ ಅಧ್ಯಕ್ಷ ಸುಧಾಕರ ನಾಯ್ಕ, ಭಟ್ಕಳ ನಾಮಧಾರಿ ಸಮಾಜದ ಅಧ್ಯಕ್ಷ ಕೃಷ್ಣ ನಾಯ್ಕ ಆಸರಕೇರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.