ಶಿರಸಿ: ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ಜನ ವಿರೋಧಿ ನೀತಿಗಳನ್ನು ಖಂಡಿಸಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ನಿಂದ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಶಿರಸಿ ಉಪವಿಭಾಗಾಧಿಕಾರಿ ಕಚೇರಿಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ತಹಶಿಲ್ದಾರ್ ಎಂ.ಆರ್.ಕುಲಕರ್ಣಿ ಅವರ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಬಿಜೆಪಿ ಜನ ವಿರೋಧಿ ನೀತಿಗಳಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
2014ರ ಚುನಾವಣೆ ನಂತರ ಬಿಜೆಪಿ ವಿರೋಧ ನೀತಿ ಆಡಳಿತ ನಡೆಸುತ್ತಿದೆ. ರೈತರು, ಕೂಲಿಕಾರ್ಮಿಕರು, ಬಡವರ ಚಿಂತೆಯಿಲ್ಲದೇ ಉದ್ಯಮಿಗಳನ್ನು ಬೆಂಬಲಿಸುತ್ತಿದೆ. ಕೇವಲ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ. ಅತಿವೃಷ್ಟಿ, ಅನಾವೃಷ್ಟಿಯಂತಹ ಸಂದರ್ಭದಲ್ಲಿಯೂ ಸ್ಪಂದಿಸದ ಕೇಂದ್ರ ಸರ್ಕಾರ ದೇಶಕ್ಕೆ ಕಪ್ಪುಚುಕ್ಕೆ ಎಂದು ದೂರಿದರು.
ತಕ್ಷಣ ರಾಷ್ಟ್ರಪತಿ ಅವರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಸುಧಾರಿಸಬೇಕು. ಕೇಂದ್ರ ಸರ್ಕಾರಕ್ಕೆ ಶಿಸ್ತಿನ ಆಡಳಿತ ನೀಡುವಂತೆ ಸೂಚಿಸಿ ಬಡತನ, ನಿರುದ್ಯೋಗ ನಿರ್ಮೂಲನೆ ಮಾಡಬೇಕು ಎಂದು ಒತ್ತಾಯಿಸಿದರು.