ಕಾರವಾರ/ಉತ್ತರ ಕನ್ನಡ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾರವಾರದಲ್ಲಿ ಮಹಿಳೆಯರಿಗಾಗಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ಮಹಿಳೆಯರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಮಾಲಾದೇವಿ ಮೈದಾನದಲ್ಲಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು.ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಸ್ತ್ರಿ ಶಕ್ತಿ ಸಂಘದವರು ಸೇರಿದಂತೆ ನೂರಕ್ಕೂ ಹೆಚ್ಚು ಮಹಿಳೆಯರು ಕ್ರೀಡೆಗಳಲ್ಲಿ ಭಾಗವಹಿಸಿದ್ದರು. ಪ್ರಮುಖವಾಗಿ 100 ಮೀಟರ್ ಓಟ, ನಡಿಗೆ, ಥ್ರೋ ಬಾಲ್ ಎಸೆತ, ಗುಂಡು ಎಸೆತ, ಲೆಮೆನ್ ಅಂಡ್ ಸ್ಪೂನ್ ಆಟ ಸೇರಿದಂತೆ ಇನ್ನಿತರ ಸ್ಪರ್ಧೆಗಳನ್ನ ಏರ್ಪಡಿಸಲಾಗಿತ್ತು.
ಈ ವೇಳೆ ಮಾತನಾಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೋನಲ್ ಐಯ್ಗಳ್, ಸ್ವಾವಲಂಬಿಯಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಗುರುತಿಸಿಕೊಂಡಿರುವ ಮಹಿಳೆಯರು ಇಂದು ಪರುಷರಂತೆಯೇ ಬದುಕುತ್ತಿದ್ದಾರೆ. ಇಂತಹ ಮಹಿಳೆಯರಿಗೆ ಇನ್ನಷ್ಟು ಆತ್ಮಸ್ಥೈರ್ಯ ತುಂಬುವುದರ ಜೊತೆಗೆ ಅವರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕ್ರೀಡಾಕೂಟ ಆಯೋಜಿಸಿದ್ದು, ಇದೇ 15 ರಂದು ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಯಲಿದೆ. ಅಂದು ಜಿಲ್ಲೆಯ ವಿವಿಧ ಭಾಗಗಳಿಂದ ಆಯ್ಕೆಯಾದ ಮಹಿಳೆಯರು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.