ಕಾರವಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಹಾಮಾರಿ ಕೊರೊನಾ ಇದುವರೆಗೂ ಸಹ ನಿಯಂತ್ರಣಕ್ಕೆ ಬಂದಿಲ್ಲ. ಆದ್ರೆ ಈ ಹಿಂದೆ ಕೊರೊನಾ ಹಾಟ್‌ಸ್ಪಾಟ್ ಆಗಿ ಗುರುತಿಸಿಕೊಂಡಿದ್ದ ಕರಾವಳಿ ಜಿಲ್ಲೆ ಉತ್ತರಕನ್ನಡದಲ್ಲಿ ಕೊರೊನಾ ಪ್ರಕರಣಗಳು ಶೂನ್ಯ ಹಂತಕ್ಕೆ ತಲುಪಿದ್ದು, ಇಂತಹ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ.
ಹೌದು, ಕಳೆದ ಆರು ತಿಂಗಳಿನಿಂದ ಕರಾವಳಿ ಜಿಲ್ಲೆ ಉತ್ತರಕನ್ನಡ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಶತಾಯಗತಾಯ ಪ್ರಯತ್ನಿಸುತ್ತಿದೆ. ಲಾಕ್‌ಡೌನ್ ಅವಧಿಯಲ್ಲಿ ಒಂದು ಹಂತದಲ್ಲಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ ಅನ್‌ಲಾಕ್ ಜಾರಿ ಬಳಿಕ ಏಕಾಏಕಿ ಹೆಚ್ಚಾಗಿದ್ದು ಜನರ ಆತಂಕಕ್ಕೂ ಕಾರಣವಾಗಿತ್ತು. ಇದೀಗ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದ್ದು ಜನತೆಗೆ ಸಿಹಿ ಸುದ್ದಿ ನೀಡಿದಂತಾಗಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ ತಿಂಗಳು ದಿನವೊಂದಕ್ಕೆ ಸರಾಸರಿ 200 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಜೊತೆಗೆ ಕೊರೊನಾ ಸೋಂಕಿತರ ಸಾವಿನ ಪ್ರಮಾಣ ಸಹ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಜನರಲ್ಲಿ ಭಯದ ವಾತಾವರಣವನ್ನೇ ಸೃಷ್ಟಿ ಮಾಡಿತ್ತು. ಸದ್ಯ ಕಳೆದ ಹತ್ತು ದಿನಗಳಿಂದ ಜಿಲ್ಲೆಯ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಸದ್ಯ ದಿನವೊಂದಕ್ಕೆ 20 ರಂತೆ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿದ್ದು ಕೊರೊನಾ ನಿಯಂತ್ರಣಕ್ಕೆ ಬರುವ ಮುನ್ಸೂಚನೆ ನೀಡಿದೆ. ಮೊದಲಿಗಿಂತ ಹೆಚ್ಚಿನದಾಗಿ ಕೋವಿಡ್ ಟೆಸ್ಟ್‌ಗಳನ್ನು ಮಾಡಲಾಗುತ್ತಿದ್ದು ಪಾಸಿಟಿವ್ ಪ್ರಕರಣಗಳು ಕಡಿಮೆ ಪ್ರಮಾಣದಲ್ಲಿ ಕಂಡುಬರುತ್ತಿರೋದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಶರದ್ ನಾಯಕ ಮಾಹಿತಿ ನೀಡಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 13,372 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅವರಲ್ಲಿ 12,898 ಮಂದಿ ಈಗಾಗಲೇ ಗುಣಮುಖರಾಗಿದ್ದಾರೆ. ಸದ್ಯ 304 ಮಂದಿ ಸಕ್ರಿಯ ಕೊರೊನಾ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದುವರೆಗೆ 170 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಸದ್ಯ ಸೋಂಕಿತರ ಸಾವಿನ ಸಂಖ್ಯೆ ಸಹ ಸ್ಥಿರವಾಗಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆ ಕೊರೊನಾ ಮುಕ್ತವಾಗುವ ನಿರೀಕ್ಷೆ ಇದೆ. ಇನ್ನು ಸದ್ಯ ಹಬ್ಬದ ನಿಮಿತ್ತ ಬೇರೆ ಬೇರೆ ಭಾಗಗಳಿಂದ ಜನರು ಜಿಲ್ಲೆಗೆ ಆಗಮಿಸಿರುವ ಹಿನ್ನೆಲೆ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಜನರು ನಿರ್ಲಕ್ಷ್ಯ ವಹಿಸದೇ ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಡಾ.ಕೆ ಹರೀಶಕುಮಾರ್ ಮನವಿ ಮಾಡಿದ್ದಾರೆ.
ಇನ್ನು ಜನರು ಹೆಚ್ಚು ಸೇರುವಂತಹ ಪ್ರವಾಸಿ ತಾಣಗಳು, ಕಾರ್ಯಕ್ರಮಗಳ ಮೇಲೆ ಹೆಚ್ಚು ನಿಗಾವಹಿಸಲು ಜಿಲ್ಲಾಡಳಿತ ಮುಂದಾಗಿದ್ದು ಮಾಸ್ಕ್ ಧರಿಸದೇ ಓಡಾಡುವವರಿಗೆ ಕಟ್ಟುನಿಟ್ಟಾಗಿ ದಂಡ ವಿಧಿಸುವ ಕ್ರಮಕ್ಕೂ ಸಿದ್ಧತೆ ಮಾಡಿಕೊಂಡಿದೆ.