ಕಾರವಾರ (ಉತ್ತರಕನ್ನಡ): ಕೊರೊನಾ ಚಿಕಿತ್ಸೆ ಹೆಸರಿನಲ್ಲಿ ಬಿಜೆಪಿಯವರು ಹೆಣದ ಮೇಲೆ ಹಣ ಮಾಡುತ್ತಿದ್ದು, ಶವದ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.
ಕಾರವಾರದಲ್ಲಿ ಮಾತನಾಡಿದ ಅವರು, ಕೋವಿಡ್-19 ರೋಗ ತಡೆಗಟ್ಟುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಪ್ರಧಾನಿ ಮೋದಿ ಕೇವಲ ಮಾತಿನಲ್ಲಿಯೇ ಜನರನ್ನು ಮರಳು ಮಾಡಿದ್ದಾರೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಕೊರೊನಾ ಸಂದರ್ಭದಲ್ಲೂ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದೆ. ಇದು ಕೇವಲ ಕಾಂಗ್ರೆಸ್ನ ಆರೋಪವಲ್ಲ, ಬದಲಾಗಿ ಹೈಕೋರ್ಟ್ ಕೂಡ ಹೇಳಿದೆ. ಕೊರೊನಾ ಸಂದರ್ಭದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು (ಎಸ್ಒಪಿ) ಪಾಲಿಸಿಲ್ಲ ಎಂದು ಹೈಕೋರ್ಟ್ ಆಕ್ಷೇಪಿಸಿತ್ತು. ಬಳಿಕ ಸರ್ಕಾರ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯ ಪೌರಾಯುಕ್ತರನ್ನು ಬದಲಿಸಿದೆ ಎಂದರು.
ಕೊರೊನಾ ಸಂದರ್ಭದಲ್ಲಿ ಸ್ಯಾನಿಟೈಸರ್, ವೆಂಟಿಲೇಟರ್ ಸೇರಿದಂತೆ ವಿವಿಧ ಸುರಕ್ಷತಾ ಸಾಮಗ್ರಿಗಳ ಖರೀದಿಯಲ್ಲಿ ಸುಮಾರು 2 ಸಾವಿರ ಕೋಟಿ ರೂ. ಹಗರಣ ನಡೆಸಲಾಗಿದೆ. ಬಿಜೆಪಿಯ ಮಾಜಿ ಶಾಸಕ ಬಗಲಿಯವರು ವೆಂಟಿಲೇಟರ್ ಸೆಕೆಂಡ್ ಹ್ಯಾಂಡ್ ಎಂದು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ. ಸರ್ಕಾರದ ಹಗರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲು ಈಗಾಗಲೇ ಒತ್ತಾಯಿಸಿದ್ದೇವೆ. ಸರ್ಕಾರ ಈ ಬಗ್ಗೆ ಶ್ವೇತಪತ್ರ ಹೊರಡಿಸಬೇಕಲ್ಲದೆ, ಭ್ರಷ್ಟಾಚಾರ ಆರೋಪ ಹೊತ್ತವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.