ಕಾರವಾರ (ಉತ್ತರ ಕನ್ನಡ): ಉತ್ತರಕನ್ನಡ ಜಿಲ್ಲೆಯ ಕಾರವಾರ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ಸಿದ್ಧತಾ ಕಾರ್ಯಗಳು ಪೂರ್ಣಗೊಂಡಿದ್ದು, ಒಟ್ಟು 19,880 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ತಡವಾಗಿ ನಡೆಯುತ್ತಿರುವ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಸೂಕ್ತ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಾಗಿದೆ.
ವಿದ್ಯಾರ್ಥಿ ಸಾಮಾಜಿಕ ಅಂತರದೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಈಗಾಗಲೇ ಬಾಕ್ಸ್ ಹಾಕಲಾಗಿದೆ. ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯಗೊಳಿಸಲಾಗಿದೆ. ಸ್ಯಾನಿಟೈಸರ್, ಮಾಸ್ಕ್ಗಳನ್ನೂ ಕೂಡ ವಿತರಿಸಲಾಗುತ್ತಿದೆ. ಈ ಸಂಬಂಧ ಇಂದು ಪರೀಕ್ಷಾ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ.
ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ 9580 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರಗಳಿದ್ದು, 10,300 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.
ಗುಡ್ಡಗಾಡು ಪ್ರದೇಶ, ಕುಗ್ರಾಮಗಳಿಂದ ಬರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರಿಗೂ ಜಿಲ್ಲಾಡಳಿತದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಬಸ್ ಮಾರ್ಗವಿಲ್ಲದ ವಿದ್ಯಾರ್ಥಿಗಳಿಗಾಗಿ ಒಟ್ಟು 209 ಸರ್ಕಾರಿ ವಾಹನಗಳನ್ನು ಮೀಸಲಿರಿಸಲಾಗಿದೆ. ಇದರ ಜೊತೆಗೆ ಮಕ್ಕಳ ಪಾಲಕರಿಗೆ ಎಸ್ಎಂಎಸ್ ಮೂಲಕ ಕೊಠಡಿ ಸಂಖ್ಯೆ, ಡೆಸ್ಕ್ ನಂಬರ್ ಸಹ ನೀಡಲಾಗಿದೆ.