ಮುದ್ದೇಬಿಹಾಳ (ವಿಜಯಪುರ): ತಾಲೂಕಿನ ನಾಲತವಾಡ ಗಡಿ ಸಮೀಪದಲ್ಲಿರುವ ನಾರಾಯಣಪುರ ಬಸವಸಾಗರ ಜಲಾಶಯದಿಂದ 22 ಕ್ರೆಸ್ಟ್ ಗೇಟ್‌ಗಳ ಮೂಲಕ 2.57 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಯಬಿಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಲಾಶಯಕ್ಕೆ ಆಲಮಟ್ಟಿ ಅಣೆಕಟ್ಟಿನಿಂದ 1.90 ಲಕ್ಷ ಕ್ಯುಸೆಕ್ ಒಳಹರಿವು ಬರುತ್ತಿದೆ. ಬಸವಸಾಗರ ಜಲಾಶಯ 33.313 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಈಗಾಗಲೇ 29.15 ಟಿಎಂಸಿ ಸಂಗ್ರಹವಾಗಿದೆ. ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ ಹಿನ್ನೆಲೆಯಲ್ಲಿ ನದಿಪಾತ್ರದ ಜನರಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಪ್ರವಾಸಿಗರ ದಂಡು:
ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆಯಲ್ಲಿ, ಜಲಾಶಯ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ನಾರಾಯಣಪುರ ಬಸವಸಾಗರ ಜಲಾಶಯದ ವ್ಯಾಪ್ತಿ ವಿಜಯಪುರ, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಹಂಚಿಹೋಗಿದೆ. ಹೀಗಾಗಿ ನಾರಾಯಣಪುರ ಬಳಿಯಿರುವ ಛಾಯಾ ಭಗವತಿಯಲ್ಲೂ ಜಲಾಶಯದ ರುದ್ರರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ.