ವಿಜಯಪುರ: ಹೆಲ್ಮೆಟ್ ಧರಿಸದ ಹಿನ್ನೆಲೆಯಲ್ಲಿ ಪ್ರತಿದಿನ ರಸ್ತೆ ಅಪಘಾತದಲ್ಲಿ ಒಂದು ಸಾವು ಹಾಗೂ ನಾಲ್ಕು ಜನರಿಗೆ ಗಾಯವಾಗುತ್ತಿದೆ ಎಂದು ಎಸ್ಪಿ ಪ್ರಕಾಶ ನಿಕ್ಕಂ ಕಳವಳ ವ್ಯಕ್ತಪಡಿಸಿದರು.
ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ 31 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸದೆ ರಸ್ತೆ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಲಾಯಿಸುವುದರಿಂದ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಕಡ್ಡಾಯವಾಗಿ ಸರ್ಕಾರಿ ನೌಕರರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂತೆ ಡಿಸಿ ಆದೇಶ ಹೊರಡಿಬೇಕು ಎಂದು ವಿನಂತಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ, ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ. ಇದರಲ್ಲಿ ಪೊಲೀಸ್ ಅಧಿಕಾರಿಗಳ ಶ್ರಮ ಅಪಾರವಾಗಿದೆ. ಇಂದು ನಗರದಲ್ಲಿ ರಸ್ತೆ ನಿಯಮಗಳನ್ನು ಪಾಲನೆ ಮಾಡ್ತಿರೋದು ಕಂಡು ಬರುತ್ತಿದೆ. ಇಂದಿನಿಂದಲೇ ಸರ್ಕಾರಿ ನೌಕರರು ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸುವಂತೆ ಆದೇಶ ಹೊರಡಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
ಇನ್ನೂ ರಾಷ್ಟ್ರೀಯ ರಸ್ತೆ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಹಾಗೂ ಜಾಗೃತಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಭಾಗವಹಿಸಿ ಗೆದ್ದ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯಿಂದ ಪಾರಿತೋಷಕ ನೀಡಿ ಗೌರವಿಸಲಾಯಿತು. ಸಂಚಾರಿ ನಿಯಮ ಪಾಲನೆಯಲ್ಲಿ ಯಶಸ್ವಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದರು.