ವಿಜಯಪುರ: ಕಿತ್ತೂರು ರಾಣಿ ಚನ್ನಮ್ಮ ಅವರ ತತ್ತ್ವಾದರ್ಶಗಳನ್ನು ಜೀವನದಲ್ಲಿ ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಜನರಿಗೆ ಕರೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ನಡೆದ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವದಲ್ಲಿ ಚನ್ನಮ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಿತ್ತೂರು ರಾಣಿ ಚನ್ನಮ್ಮ ಅಂದಿನ ಕಾಲದಲ್ಲಿ ಸ್ತ್ರಿಯರ ಸಮಾನತೆಗೆ ಪ್ರಾಧ್ಯಾನತೆ ನೀಡಿದ್ದರು. ಅದೇ ಕಾರಣದಿಂದ ನಾವಿಂದು ಅವರನ್ನು ನೆನಪಿಸಿಕೊಳ್ಳುತ್ತಿದ್ದೇವೆ ಎಂದ ಅವರು, ಚೆನ್ನಮ್ಮ ಹೋರಾಟದ ಇತಿಹಾಸವನ್ನು ಎಲ್ಲ ಮಹಿಳೆಯರು ತಿಳಿದುಕೊಳ್ಳುವಂತೆ ಸಲಹೆ ನೀಡಿದರು.
ಕೊರೊನಾ ಭೀತಿಯಿಂದ ಜಯಂತಿಯನ್ನ ಸರಳವಾಗಿ ಆಚರಣೆ ಮಾಡಲಾಯಿತು. ಸಿಪಿಐ ಬಸವರಾಜ ಮೂರ್ಕತಿಹಾಳ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಪಂಚಮಸಾಲಿ ಸಮುದಾಯದ ಮುಖಂಡರು ಭಾಗಿಯಾಗಿದ್ದರು.