ವಿಜಯಪುರ: ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ಪೌರತ್ವ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ವಿಜಯಪುರದಲ್ಲಿ ಎಐಯುಟಿಯುಸಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ರು. ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ. ರೈತರ ಕೃಷಿ ಉತ್ಪನ್ನಗಳ ಬೆಲೆ ಕುಸಿದಿದೆ. ಸರ್ಕಾರ ತನ್ನ ಒಡೆತನದ ಅನೇಕ ಉದ್ಯಮಗಳನ್ನು ಖಾಸಗೀಕರಣ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಸರ್ಕಾರ ಅದನ್ನು ಹಿಂಪಡೆಯುತ್ತಿಲ್ಲ. ಅನೇಕ ಕಾರ್ಮಿಕರು ಸರಿಯಾದ ವೇತನವಿಲ್ಲದೆ ಸಂಕಷ್ಟ ಅನುಭವಿಸವಂತಾಗಿದೆ. ರಾಜ್ಯ ಸರ್ಕಾರ ನಾಳೆ ಮಂಡಿಸುವ ಬಜೆಟ್ನಲ್ಲಿ ಕಾರ್ಮಿಕರಿಗೆ ವಿಶೇಷ ಅನುದಾನ ಮೀಸಲಿಡುವಂತೆ ಒತ್ತಾಯಿಸಿದರು. ಕೇಂದ್ರ ಸರ್ಕಾರ ಕಾರ್ಮಿಕ ಕಾಯ್ದೆ ತಿದ್ದುಪಡಿ ರದ್ದುಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರತಿಭಟನಾಕಾರರು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.