ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಜನ ಬರುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ವಿಜಯಪುರ ನಗರ ಹಾಗೂ ಸುತ್ತಮುತ್ತಲಿನ ಎಲ್ಲಾ ಪೆಟ್ರೋಲ್ ಮತ್ತು ಡೀಸೆಲ್ ಬಂಕ್ಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗುತ್ತಿದೆ.
ಸ್ವಾಮೀಜಿ ಅಂತಿಮ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಸಹಾಯವಾಗಲೆಂದು ಪೆಟ್ರೋಲಿಯಂ ಅಸೋಸಿಯೇಷನ್ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಈ ಬಗ್ಗೆ ವಿಜಯಪುರ ಜಿಲ್ಲಾ ಪೆಟ್ರೋಲಿಯಂ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಅರುಣ ಹುಂಡೇಕರ ಮತ್ತು ಕರ್ನಾಟಕ ರಾಜ್ಯ ಪೆಟ್ರೋಲಿಯಂ ಅಸೋಸಿಯೇಷನ್ ಉಪಾಧ್ಯಕ್ಷ ದಾದು ತಿವಾರಿ ಮಾಹಿತಿ ನೀಡಿದರು.
ನಿನ್ನೆ ಸಂಜೆ ನಿಧನ ಹೊಂದಿದ್ದ ಶ್ರೀಗಳು: ಸಿದ್ದೇಶ್ವರ ಶ್ರೀಗಳು ಸೋಮವಾರ ಸಂಜೆ ನಿಧನ ಹೊಂದಿದ್ದರು. ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಇಂದು ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದೀಗ ಜ್ಞಾನಯೋಗಾಶ್ರಮದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ನಂತರ ಸೈನಿಕ ಶಾಲೆ ಆವರಣಕ್ಕೆ ತಂದು ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.
ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಜನಸಾಗರ, ಸಂಜೆ ಅಂತ್ಯಕ್ರಿಯೆ; ವಿಜಯಪುರದ ಶಾಲೆ, ಕಾಲೇಜುಗಳಿಗೆ ರಜೆ