ವಿಜಯಪುರ: ಕೊರೊನಾ ಸಂಕಷ್ಟದ ಪರಿಸ್ಥಿತಿಯಲ್ಲೂ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಮಾಸಿಕ 12 ಸಾವಿರ ವೇತನ ನಿಗದಿ ಮಾಡುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆ ಮುಖಂಡೆ ಲೈಲಾ ಪಠಾಣ ಹೇಳಿದರು.
ನಗರದಲ್ಲಿ ಮಾಧ್ಯಮಗೊಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ಭೀತಿ ಆರಂಭದ ದಿನಗಳಿಂದಲೂ ಆಶಾ ಕಾರ್ಯಕರ್ತೆಯರು ಪ್ರಾಣವನ್ನೂ ಲೆಕ್ಕಿಸದೆ ಕೆಲಸ ಮಾಡುತ್ತಿದ್ದಾರೆ. ಆದ್ರೆ ಸರ್ಕಾರ ಮಾತ್ರ ಕಾಲ ಕಾಲಕ್ಕೆ ವೇತನ ನೀಡದೆ ಅನ್ಯಾಯ ಮಾಡುತ್ತಿದೆ. ಇತ್ತ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ರಕ್ಷಣಾ ಸಾಮಗ್ರಿ ನೀಡುತ್ತಿಲ್ಲ. ಸಮಾಜದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.
ವೇತನ ಹೆಚ್ಚಿಸುವಂತೆ ಸಂಬಂಧಿಸಿದ ಸಚಿವರ ಗಮನಕ್ಕೆ ತಂದರೂ ವೇತನ ಕುರಿತು ಇಂದು ಮಾತನಾಡುತ್ತೇವೆ, ನಾಳೆ ಮಾತನಾಡುತ್ತೇವೆ ಎಂದು ಹಾರಿಕೆ ಉತ್ತರ ಹೇಳುತ್ತಾರೆ ಎಂದು ಕಿಡಿಕಾರಿದರು.