ವಿಜಯಪುರ: ಕಾಂಗ್ರೆಸ್ ಪಕ್ಷ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬವನ್ನು ದಾವಣಗೇರಿಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಹೆಸರಿನಲ್ಲಿ ಮಾಡಿರಬಹುದು. ಆದರೆ ಇದಕ್ಕೆ ಬಿಜೆಪಿ ಕಾರ್ಯಕರ್ತರು ಭಯಪಡುವ ಅಗತ್ಯವಿಲ್ಲ. ಕೇಂದ್ರ ನಾಯಕರು ಕಾಲ ಕಾಲಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಭಿಪ್ರಾಯ ವ್ಯಕ್ತಪಡಿಸಿದರು.
ನರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಕಾರ್ಯಕ್ರಮದಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತದೆ ಎನ್ನುವದು ಏನೂ ಇಲ್ಲ, ಎಲ್ಲವೂ ಕೇಂದ್ರದ ಗಮನಕ್ಕಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಕರ್ನಾಟಕದಲ್ಲಿ ಪಕ್ಷಕ್ಕೆ ಹಿನ್ನಡೆಯಾಗದಂತೆ ಸೂಕ್ತ ಸಮಯಕ್ಕೆ ಸೂಕ್ತ ನಿರ್ಣಯ ಕೈಗೊಳ್ಳುತ್ತಾರೆ ಎನ್ನುವುದು ನನಗೆ ವಿಶ್ವಾಸವಿದೆ ಎಂದರು.
ಜಗತ್ತೇ ನಮ್ಮ ದೇಶದತ್ತ ನೋಡುವಂತ ಪ್ರಧಾನಿಗಳಿದ್ದಾರೆ. ಈ ಜನ್ಮ ಉತ್ಸವಗಳಿಂದ ಭಯಪಡುವ ಅಗತ್ಯವಿಲ್ಲ, ಉತ್ಸವಕ್ಕೆ ಜನ ಹೋಗಿದ್ದಾರೆ ಎಂಬ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಗೆದ್ದಿದೆ ಎನ್ನುವ ಭ್ರಮೆಯಲ್ಲಿ ಇರಬಹುದು. ಜನ ಬುದ್ಧಿವಂತರಿದ್ದಾರೆ. ಯಾವಾಗ ಏನು ನಿರ್ಧಾರ ತೆಗೆದುಕೊಳ್ಳಬೇಕೊ ಅದನ್ನು ತೆಗೆದುಕೊಳ್ಳುತ್ತಾರೆ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಯತ್ನಾಳ್, ಅದು ವರಿಷ್ಠರ ಗಮನಕ್ಕೆ ಇರುತ್ತದೆ, ನಮಗೆ ಗೊತ್ತಾಗುವುದಿಲ್ಲ ಎಂದರು. ಸಂಘಟನಾ ಶಕ್ತಿ ಯಾರ ಬಳಿ ಇರುತ್ತದೆಯೋ, ಅಂಥವರು ಹುದ್ದೆ ಅಲಂಕರಿಸುತ್ತಾರೆ ಎಂದು ಹೇಳಿದರು.
ಬಿಜೆಪಿ ಮುಖಂಡನ ಹತ್ಯೆ ಕುರಿತು ಪ್ರತಿಕ್ರಿಯೆ: ದಕ್ಷಿಣ ಕನ್ನಡದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಯತ್ನಾಳ್, ಹತ್ಯೆಯಿಂದ ಪಕ್ಷದ ಕಾರ್ಯಕರ್ತರಿಗೆ ನೋವಾಗಿದೆ. ಕಾರ್ಯಕರ್ತರಿಗೆ ಅಭದ್ರತೆ ಕಾಡುತ್ತಿದೆ. ಈ ವಿಚಾರವನ್ನು ಕೇಂದ್ರ ನಾಯಕರು ಹಾಗು ಹಿರಿಯರು ಗಮನಿಸಿದ್ದಾರೆ. ಇದಕ್ಕೆ ಸೂಕ್ತ ನಿರ್ಣಯ ಕೈಗೊಳ್ಳುತ್ತಾರೆ. ಕಾರ್ಯಕರ್ತರ ಬಗ್ಗೆ ಹಗುರವಾಗಿ ಮಾತನಾಡುವುದು, ಕೀಳುಮಟ್ಟದಲ್ಲಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಪಕ್ಷದ ನಾಯಕರಿಗೆ ಮನವಿ ಮಾಡಿದರು.
ಇದನ್ನೂ ಓದಿ: ನೆರೆ ಪರಿಹಾರದಲ್ಲಿ ತಾರತಮ್ಯ ಮಾಡಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ