ವಿಜಯಪುರ/ದಾವಣಗೆರೆ: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ಖ್ಯಾತೆ ವಿಚಾರವಾಗಿ ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ಗಳಿಗೆ ಕಪ್ಪು ಮಸಿ ಬಳಿದು ಸಿಎಂ ಬೊಮ್ಮಾಯಿ ಭಾವಚಿತ್ರಕ್ಕೆ ಅವಮಾನ ಮಾಡಿದ್ದನ್ನು ಖಂಡಿಸಿ ವಿಜಯಪುರ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಯಿಂದ ಪ್ರತಿಭಟನೆ ನಡೆಯಿತು.
ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಪಡ್ನವೀಸ್, ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ, ಮಹಾರಾಷ್ಟ್ರ ನವ ನಿರ್ಮಾಣ ಸಂಘಟನೆಯ ರಾಜ್ ಠಾಕ್ರೆ ಇರುವ ಬ್ಯಾನರ್ಗೆ ಬೆಂಕಿ ಹಚ್ಚಿದರು.
ದಾವಣಗೆರೆಯಲ್ಲೂ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸುತ್ತಿರುವ ಗೂಂಡಾಗಳ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು. ಅಲ್ಲಿನ ರಾಜಕಾರಣಿಗಳು ದಶಕಗಳಿಂದ ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರ ನಡುವೆ ಸಂಘರ್ಷದ ವಾತಾವರಣವನ್ನು ನಿರ್ಮಿಸಲು ಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ: ಉದ್ದೇಶಪೂರ್ವಕವಾಗಿ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ: ಸಿದ್ದರಾಮಯ್ಯ