ವಿಜಯಪುರ: ಗಿರಿಜನ ಉಪ ಯೋಜನೆಯಡಿ ವಿವಿಧ ಇಲಾಖೆ ವ್ಯಾಪ್ತಿಯಲ್ಲಿ, ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾ ಭವನದಲ್ಲಿ ನಡೆದ ಇಲಾಖಾವಾರು ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಗಿರಿಜನ ಉಪ ಯೋಜನೆ ಹಾಗೂ ಕೃಷಿ ಯೋಜನೆಯಡಿ ಯಾವುದೇ ಅನುದಾನ ಮರಳಿ ಹೋಗದಂತೆ ಅಧಿಕಾರಿಗಳು ಪ್ರಗತಿಗೆ ಒತ್ತು ನೀಡಬೇಕು ಎಂದರು.
ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಗೆ ಬರುವ ಸಿಂದಗಿ, ಅಲಮೇಲ, ನಾಲತವಾಡ, ಮನಗೂಳಿ, ಬ.ಬಾಗೇವಾಡಿಗಳಲ್ಲಿ ನಿಗದಿತ ಗುರಿಗೆ ಪ್ರಗತಿ ಸಾಧಿಸಿಲ್ಲ. ಕಾರಣ ಕೇಳಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ತಿಳಿಸಿದರು. ಇನ್ನೂ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆ ನಡೆಸುತ್ತಿರುವ ದೂರುಗಳು ಕೇಳಿ ಬರುತ್ತಿವೆ. ಅವರ ಮೇಲೆ ತೀವ್ರ ನಿಗಾ ವಹಿಸಬೇಕು. ಹಾಗೂ ಮೀನುಗಾರಿಕೆ ಕೆರೆಗಳ ವ್ಯಾಪ್ತಿಯಲ್ಲಿ ಬರುವ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳು ಮಾಹಿತಿ ನೀಡಬೇಕು.
ಅರ್ಧಕ್ಕೆ ನಿಂತ ಕಾಮಗಾರಿಗಳು ಮುಗಿಸಬೇಕು ಎಂದು ಸೂಚಿಸಿದರು. ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು, ಅನುದಾನ ಸಮರ್ಪಕವಾಗಿ ಬಳಕೆ ಮಾಡುವಂತೆ ಅಧಿಕಾರಿಗಳಿಗೆ ಹೇಳಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಗೋವಿಂದರೆಡ್ಡಿ, ಸಮಾಜ ಕಲ್ಯಾಣಾಧಿಕಾರಿ ಮಹೇಶ ಪೋತದಾರ ಉಪಸ್ಥಿತರಿದ್ದರು.