ವಿಜಯಪುರ: ಜಿಲ್ಲೆಯ ಭೀಮಾ ಮತ್ತು ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ಸಾಗಾಣಿಕೆ ನಿಯಂತ್ರಿಸುವ ಜೊತೆಗೆ ತೀವ್ರ ನಿಗಾ ಇಡುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ವಿಡಿಯೋ ಸಂವಾದ ಸಭಾಂಗಣದಲ್ಲಿ ತಾಲೂಕುಮಟ್ಟದ ಕಂದಾಯ, ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ತಾಲೂಕು ಮಟ್ಟದಲ್ಲಿ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿರುವ ತಾಲೂಕು ಕಾರ್ಯಪಡೆ ಸಮಿತಿ ಇನ್ನೂ ಚುರುಕಾಗಿ ಕಾರ್ಯನಿರ್ವಹಿಸುವ ಮೂಲಕ ಅಕ್ರಮ ಮರಳು ಸಾಗಾಣಿಕೆ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಭೀಮಾ ನದಿ ತೀರ ವಿಶೇಷವಾಗಿ ಇಂಡಿ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಣೆ ತಡೆಗಾಗಿ ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ಇಬ್ಬರು ವಿಶೇಷ ಅಧಿಕಾರಿಗಳನ್ನು 24X7 ಕಾಲ ನಿಯೋಜಿಸಿ, ಭೀಮಾ ನದಿ ನೀರು ಬರುವವರೆಗೆ ತೀವ್ರ ನಿಗಾ ಇಡಲು ಉದ್ದೇಶಿಸಲಾಗಿದೆ. ಅದರಂತೆ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಇದೆ.
ಪೊಲೀಸ್ ಉಪ ಅಧೀಕ್ಷಕರು, ತಹಶೀಲ್ದಾರ, ಲೋಕೋಪಯೋಗಿ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಮಿತಿಯು ಚುರುಕಾಗಿ ಕಾರ್ಯನಿರ್ವಹಿಸಬೇಕು. ಅಕ್ರಮ ಮರಳು ಸಾಗಣೆ ಕುರಿತು ಬರುವ ದೂರುಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮತ್ತು ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ತಿಳಿಸಿ ಅವಶ್ಯಕ ಸಂದರ್ಭದಲ್ಲಿ ಪೊಲೀಸ್ ಇಲಾಖೆ ನೆರವು ಪಡೆಯಲು ತಿಳಿಸಿದರು.